
ಚಿತ್ರದುರ್ಗ: ‘ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಜ. 15ರಂದು ಹರಜಾತ್ರೆ ನಡೆಸಲು ನಿರ್ಧರಿಸಲಾಗಿದೆ. ಈ ವರ್ಷ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಸಾಧಕರನ್ನು ಗುರುತಿಸಿ, ಅವರುಗಳಿಗೆ ವೀರ ರಾಣಿ ಕಿತ್ತೂರು ಚನ್ನಮ್ಮ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುತ್ತದೆ’ ಎಂದು ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ತಿಳಿಸಿದರು.
‘ಸೂರ್ಯ ಪಥ ಬದಲಿಸುವ ಮಕರ ಸಂಕ್ರಾಂತಿಯಂದು ಹರಜಾತ್ರೆ, ಕಿತ್ತೂರು ರಾಣಿ ಚನ್ನಮ್ಮಾಜೀ ದ್ವಿ–ಶತಮಾನ ವಿಜಯೋತ್ಸವ ಸಮಾರೋಪ ಸಮಾರಂಭ ಹಾಗೂ ಡಾ.ಮಹಾಂತ ಶಿವಾಚಾರ್ಯ ಸ್ವಾಮೀಜಿಯ 13ನೇ ವರ್ಷದ ಪುಣ್ಯ ಸ್ಮರಣೋತ್ಸವ ಆಯೋಜಿಸಲಾಗಿದೆ. ಇದೇ ವೇಳೆ ವಚನಾನಂದ ಸ್ವಾಮೀಜಿಯ ಅಷ್ಟಮ ವಾರ್ಷಿಕ ಪೀಠಾರೋಹಣ ನಡೆಯಲಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
‘ವೀರರಾಣಿ ಕಿತ್ತೂರು ಚನ್ನಮ್ಮಾಜಿ ಅವರ ದ್ವಿ ಶತಮಾನೋತ್ಸವ ಸಂಭ್ರಮಾಚರಣೆಯ ಸವಿನೆನಪಿಗೆ ಅವರ ಹೆಸರಿನಲ್ಲಿ ₹ 200 ಮುಖ ಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ ನಾಣ್ಯವನ್ನು ಬಿಡುಗಡೆಗೊಳಿಸಿದ್ದು ಸಂತಸದ ವಿಷಯ’ ಎಂದರು.
ಹರ ಜಾತ್ರೆಯ ಅಧ್ಯಕ್ಷ ಡಾ.ಬಸವರಾಜ ವೀರಾಪುರ, ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಜೆ.ಶಿವಪ್ರಕಾಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.