ADVERTISEMENT

ಬಸವರಾಜನ್‌ ವಿರುದ್ಧದ ಪ್ರಕರಣ: ಸರ್ಕಾರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 4:13 IST
Last Updated 31 ಜನವರಿ 2023, 4:13 IST

ಬೆಂಗಳೂರು: ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ಪ್ರಕರಣ ದಾಖಲಿಸುವಲ್ಲಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್‌ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್‌ ಅವರ ಪಾತ್ರವಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ಸಲ್ಲಿಸಲಾಗಿದೆ.

ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಸಲ್ಲಿಸಿರುವ ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪಿ.ಎನ್‌.ಹೆಗ್ಡೆ, ‘ಪ್ರಕರಣದ ತನಿಖೆಯನ್ನು ಈಗಿನ ತನಿಖಾಧಿಕಾರಿ ಸಮರ್ಪಕವಾಗಿ ನಡೆಸುತ್ತಿಲ್ಲ. ಆದ್ದರಿಂದ, ಇದನ್ನು ಹಿರಿಯ ಮಹಿಳಾ ತನಿಖಾಧಿಕಾರಿಯೊಬ್ಬರಿಗೆ ವಹಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.

ADVERTISEMENT

ವಾದ ಆಲಿಸಿದ ನ್ಯಾಯಪೀಠ, ತನಿಖೆಯ ಪ್ರಗತಿ ವರದಿಯನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಪ್ರಾಸಿಕ್ಯೂಷನ್‌ ಪರ ವಕೀಲರಿಗೆ ನಿರ್ದೇಶಿಸಿ ವಿಚಾರಣೆಯನ್ನು ಫೆಬ್ರುವರಿ 10ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.