ಚಿತ್ರದುರ್ಗ: ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ ಬುಧವಾರ ಮೂರನೆ ದಿನಕ್ಕೆ ಕಾಲಿಟ್ಟಿದೆ.
ನಗರಸಭೆ ಮುಂಭಾಗದ ಗೇಟ್ ಬಂದ್ ಮಾಡಿ ರಸ್ತೆಯಲ್ಲಿಯೇ ಮುಷ್ಕರ ಆರಂಭಿಸಿದ್ದಾರೆ. ಹೊರ ಗುತ್ತಿಗೆ ಪದ್ಧತಿ ನಿಲ್ಲಿಸಿ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು. ನೀರು ಸರಬರಾಜುದಾರರು ಹಾಗೂ ವಾಹನ ಚಾಲಕರು ಜೀವನ ಭದ್ರತೆಯಿಲ್ಲದೆ ಅನೇಕ ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಬಿಬಿಎಂಪಿಯಲ್ಲಿರುವ ಪೌರ ಕಾರ್ಮಿಕರನ್ನು ಮಾತ್ರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಯಂಗೊಳಿಸಿದ್ದು, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರನ್ನು ನಿರ್ಲಕ್ಷಿಸಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.
ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಸಿಗುತ್ತಿಲ್ಲ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಿದೆ. ಜ್ಯೋತಿ ಸಂಜೀವಿನಿ ಯೋಜನೆ ಪೌರ ಕಾರ್ಮಿಕರಿಗೆ ಸಿಗಬೇಕು. ಗುತ್ತಿಗೆ ಹೊರ ಗುತ್ತಿಗೆ ಬದಲು ನೇರ ಪಾವತಿಯಾಗಬೇಕೆಂದು ಒತ್ತಾಯಿಸಿದರು.
ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ ಮುಷ್ಕರದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ಬೆಂಬಲ ಸೂಚಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಚ್.ಮಂಜುನಾಥ್, ಪೌರ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ರೇಣುಕ, ಜಗದೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.