ADVERTISEMENT

ಚಿತ್ರದುರ್ಗ: ಕೋವಿಡ್ ಮಾರ್ಗಸೂಚಿಯಂತೆ ಸ್ವಾತಂತ್ರ್ಯ ದಿನ

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 6:24 IST
Last Updated 30 ಜುಲೈ 2021, 6:24 IST
ಕವಿತಾ ಎಸ್‌. ಮನ್ನಿಕೇರಿ
ಕವಿತಾ ಎಸ್‌. ಮನ್ನಿಕೇರಿ   

ಚಿತ್ರದುರ್ಗ: ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವ ಆಚರಿಸಲು ತೀರ್ಮಾನಿಸಲಾಯಿತು.

ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ‘ಕೋವಿಡ್ ಕಾರಣಕ್ಕೆ ಈ ಬಾರಿಯೂ ಅತ್ಯಂತ ಸರಳವಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುವುದು. ಇದಕ್ಕಾಗಿ ಈಗಾಗಲೇ ರಚಿಸಿರುವ ವಿವಿಧ ಸಮಿತಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಯಬೇಕು’ ಎಂದು ಸೂಚನೆ ನೀಡಿದರು.

‘ಕೋವಿಡ್ ಕಾರಣಕ್ಕೆ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಆದರೆ, ಎಂದಿನಂತೆ ಪೊಲೀಸ್, ಅಗ್ನಿ
ಶಾಮಕ, ಅಬಕಾರಿ, ಅರಣ್ಯ ಇಲಾಖೆ ಸೇರಿ ವಿವಿಧ ಇಲಾಖೆಗಳ ತುಕಡಿಗಳು ಪಥಸಂಚಲನದಲ್ಲಿ ಭಾಗವಹಿಸಲಿವೆ’ ಎಂದರು.

ADVERTISEMENT

‘ಆರೋಗ್ಯ ಇಲಾಖೆಯಿಂದ ಕೋವಿಡ್ ಜಾಗೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಬಾಲ್ಯವಿವಾಹದಿಂದ ಮಕ್ಕಳ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮ ಮತ್ತು ನಿಷೇಧ ಕುರಿತು ಕಾನೂನು ಕ್ರಮ ವಿಚಾರವಾಗಿ ಕಿರು ನಾಟಕ ಪ್ರದರ್ಶನ ಆಯೋಜಿಸಬೇಕು’ ಎಂದು ತಾಕೀತು ಮಾಡಿದರು.

ಕೊರೊನಾ ವಾರಿಯರ್‌ಗಳಿಗೆ ಸನ್ಮಾನ: ಅಂದಿನ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್‌ಗಳಾದ ಪೌರಕಾರ್ಮಿಕ, ಆಗ್ನಿಶಾಮಕ, ಆರೋಗ್ಯ, ಪೊಲೀಸ್, ಕಂದಾಯ ಇಲಾಖೆ, ಬೆಸ್ಕಾಂ ಸೇರಿ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲು, ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಲು ನಿರ್ಧರಿಸಲಾಯಿತು. ಕೋವಿಡ್ ಕಾರಣಕ್ಕೆ ಯೋಧರ ಮನೆಗಳಿಗೆ ಹೋಗಿ ಸನ್ಮಾನಿಸಬೇಕು ಎಂಬ ಅಭಿಪ್ರಾಯಗಳು ಕೇಳಿಬಂತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಹೆಚ್ಚುವರಿ ಜಿಲ್ಲಾಧಿಕಾರಿ ಬಾಲಕೃಷ್ಣ, ಡಿವೈಎಸ್‍ಪಿ ಪಾಂಡುರಂಗ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.