ADVERTISEMENT

ತಿಂಗಳ ಅಂತ್ಯದೊಳಗೆ ಕಾಮಗಾರಿ ಪ್ರಾರಂಭಿಸಿ: ಜಿಲ್ಲಾಧಿಕಾರಿ ವೆಂಕಟೇಶ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 4:14 IST
Last Updated 4 ಫೆಬ್ರುವರಿ 2026, 4:14 IST
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಮಾತನಾಡಿದರು
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಮಾತನಾಡಿದರು   

ಚಿತ್ರದುರ್ಗ: ‘ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಆಡಳಿತಾತ್ಮಕ ಅನುಮೋದನೆ ಪಡೆದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿ, ಫೆಬ್ರುವರಿ ಅಂತ್ಯದೊಳಗೆ ಕೆಲಸ ಪ್ರಾರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಇಲಾಖಾವಾರು ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರ.

‘ಅನುದಾನದ ಬಳಕೆ ಹಾಗೂ ಕಾಮಗಾರಿ ಯೋಜನೆ ತಯಾರಿಸುವಾಗ ಅಧಿಕಾರಿಗಳು ಎಚ್ಚರದಿಂದ ಇರಬೇಕು’ ಎಂದು ತಿಳಿಸಿದರು.

ADVERTISEMENT

‘ಯೋಜನೆಯಡಿ ಜಿಲ್ಲೆಗೆ ₹ 275 ಕೋಟಿ ಅನುದಾನ ಬಿಡುಗಡೆ ಮಾಡಿ ನಾಲ್ಕು ತಿಂಗಳು ಕಳೆದಿವೆ. ಮೊಳಕಾಲ್ಮುರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತಲಾ ₹ 50 ಕೋಟಿ ಹಾಗೂ ಹೊಳಲ್ಕೆರೆ ಕ್ಷೇತ್ರಕ್ಕೆ ₹ 25 ಕೋಟಿ ನೀಡಲಾಗಿದೆ. ಒಟ್ಟು 304 ಕಾಮಗಾರಿ ಕೈಗೊಳ್ಳುವಂತೆ ಶಾಸಕರು ಪ್ರಸ್ತಾಪಿಸಿದ್ದಾರೆ. ಇದರಲ್ಲಿ ₹ 210 ಕೋಟಿ ವೆಚ್ಚದ 178 ಕಾಮಗಾರಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ’ ಎಂದರು.

‘₹ 65 ಕೋಟಿ ವೆಚ್ಚದ 126 ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಆಡಳಿತಾತ್ಮಕ ಮಂಜೂರಾತಿ ಪಡೆದು ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್‌, ನಗರ ಸ್ಥಳೀಯ ಸಂಸ್ಥೆ ಹಾಗೂ ಪುರಸಭೆಗಳು, ನಿರ್ಮಿತಿ ಕೇಂದ್ರ, ಪಂಚಾಯತ್‌ ರಾಜ್‌ ಮತ್ತು ಎಂಜಿನಿಯರಿಂಗ್‌ ವಿಭಾಗದಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳ ವೇಗ ಹೆಚ್ಚಿಸಬೇಕು. ಭೌತಿಕ ಪ್ರಗತಿಯ ಜೊತೆಗೆ ಆರ್ಥಿಕ ಪ್ರಗತಿಯನ್ನು ಸಹ ಸಾಧಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅನುದಾನದಡಿ ಸಾಕಷ್ಟು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇವುಗಳನ್ನು ಹೊರತುಪಡಿಸಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನಯಡಿ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಈ ಕುರಿತು ಆಯಾ ಶಾಸಕರೊಂದಿಗೆ ಚರ್ಚಿಸಿಬೇಕು. ಒಂದು ವೇಳೆ ಎರಡೆರಡು ಅನುದಾನಗಳಲ್ಲಿ ಒಂದೇ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುತ್ತದೆ’ ಎಂದು ಎಚ್ಚರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ನಾಗರಾಜ್‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಹನುಮಂತಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.