ADVERTISEMENT

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ: ಕಾರಜೋಳ ಆಕ್ರೋಶ

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ ಇಲ್ಲ; ಸಂಸದ ಗೋವಿಂದ ಕಾರಜೋಳ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2025, 16:04 IST
Last Updated 14 ಮಾರ್ಚ್ 2025, 16:04 IST
ದೆಹಲಿಯ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಸಂಸ್ಥೆ ವತಿಯಿಂದ ಚಿತ್ರದುರ್ಗ ತಾಲ್ಲೂಕಿನ ಗುತ್ತಿನಾಡು ಕುವೆಂಪು ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ ಅವರು ವಿದ್ಯಾರ್ಥಿಗಳಿಗೆ ಬ್ಯಾಗ್‌, ಸಮವಸ್ತ್ರ ವಿತರಿಸಿದರು
ದೆಹಲಿಯ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಸಂಸ್ಥೆ ವತಿಯಿಂದ ಚಿತ್ರದುರ್ಗ ತಾಲ್ಲೂಕಿನ ಗುತ್ತಿನಾಡು ಕುವೆಂಪು ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಕಾರಜೋಳ ಅವರು ವಿದ್ಯಾರ್ಥಿಗಳಿಗೆ ಬ್ಯಾಗ್‌, ಸಮವಸ್ತ್ರ ವಿತರಿಸಿದರು   

ಚಿತ್ರದುರ್ಗ: ‘ಪಠ್ಯಕ್ರಮ ಕಡಿಮೆ ಮಾಡಿ ಮೂಲ ವಿಷಯಗಳ ಮೇಲೆ ಕೇಂದ್ರೀಕರಿಸುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಅಳವಡಿಸಿಕೊಳ್ಳದೇ ರಾಜ್ಯ ಕಾಂಗ್ರೆಸ್‌ ಸರ್ಕಾರ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಮಾಡಿದೆ’ ಎಂದು ಸಂಸದ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದರು.

ನವದೆಹಲಿಯ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಸಂಸ್ಥೆ ವತಿಯಿಂದ ತಾಲ್ಲೂಕಿನ ಗುತ್ತಿನಾಡು ಕುವೆಂಪು ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಡೀ ದೇಶದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಅಳವಡಿಕೆ ಮಾಡಲಾಗಿತ್ತು. ಆದರೆ ಶಿಕ್ಷಣವನ್ನು ಕೇಸರೀಕರಣ ಮಾಡಲಾಗುತ್ತಿದೆ ಎನ್ನುವ ನೆಪವೊಡ್ಡಿ ಹಳೇ ಶಿಕ್ಷಣ ನೀತಿಯನ್ನೇ ಕಾಂಗ್ರೆಸ್‌ ಸರ್ಕಾರ ಮುಂದುವರಿಸಿದೆ. ದೇಶದಲ್ಲಿ ಏಕರೂಪದ ಶಿಕ್ಷಣ ನೀತಿ ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿತ್ತು’ ಎಂದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2020ರಲ್ಲೇ ಹೊಸ ಶಿಕ್ಷಣ ನೀತಿಗೆ ಅನುಮೋದನೆ ನೀಡಿತ್ತು. ದೇಶದಾದ್ಯಂತ ಶಿಕ್ಷಣ ನೀತಿಯ ಕುರಿತು ಹಲವಾರು ಹಂತಗಳಲ್ಲಿ ವಿಚಾರ ಸಂಕಿರಣ, ಚರ್ಚಾಗೋಷ್ಠಿ, ಸಂವಾದಗಳು ನಡೆದಿದ್ದವು. ಕರ್ನಾಟಕದಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟಿತು. ಇದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ’ ಎಂದರು.

‘ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ಅವಧಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ವಲಯದಲ್ಲಿ ಸರ್ವಶಿಕ್ಷಣ ಅಭಿಯಾನದ ಮೂಲಕ ಇಡೀ ದೇಶದಲ್ಲಿ ಶಿಕ್ಷಣ ಕ್ರಾಂತಿಯೇ ನಡೆಯಿತು. ಶಾಲಾ ಕಟ್ಟಡಗಳು ರೂಪಾಂತರಗೊಂಡವು. ಮಕ್ಕಳು ಏಕರೂಪದ ಸಮವಸ್ತ್ರ ಹೊಂದಿದರು. ಈಗಲೂ ಅತ್ಯುತ್ತಮ ಶಿಕ್ಷಕರು ಸಿಗುವುದು ಸರ್ಕಾರಿ ಶಾಲೆಗಳಲ್ಲಿ. ವಾಜಪೇಯಿ ಅವರು ಸರ್ಕಾರಿ ಶಾಲೆಗಳನ್ನು ಬಲವರ್ಧನೆಗೊಳಿಸಿದರು’ ಎಂದರು.

‘ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯುತ್ತಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಲು ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ. ಆದರೂ ಶಾಲೆಗಳು ಅಭಿವೃದ್ಧಿ ಹೊಂದುತ್ತಿಲ್ಲ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ದುರದೃಷ್ಟದ ಸಂಗತಿ’ ಎಂದು ವಿಷಾದಿಸಿದರು.

‘ದೆಹಲಿಯ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಸಂಸ್ಥೆ ವತಿಯಿಂದ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್, ಸ್ವೆಟರ್, ಸಮವಸ್ತ್ರ, ಶೂ, ಸಾಕ್ಸ್‌ಗಳನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. 1ನೇ ತರಗತಿಯಿಂದ 10ನೇ ತರಗತಿಯವರೆಗೆ 1 ಲಕ್ಷ ಮಕ್ಕಳಿಗೆ ಇದರಿಂದ ಅನುಕೂಲವಾಗಲಿದೆ’ ಎಂದು ಕಾರಜೋಳ ಹೇಳಿದರು.

ಇದೇ ಸಂದರ್ಭದಲ್ಲಿ 350 ಮಕ್ಕಳಿಗೆ ಉಚಿತವಾಗಿ ಬ್ಯಾಗ್‌, ಸ್ವೆಟರ್‌ ವಿತರಣೆ ಮಾಡಲಾಯಿತು. ಸಂಸ್ಥೆಯ ಸಂಯೋಜನ ನಾಗರಾಜ್‌ ಅವರನ್ನು ಅಭಿನಂದಿಸಲಾಯಿತು.

ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮುರುಳಿ, ಈಶ್ವರ್, ತಿಪ್ಪೇಸ್ವಾಮಿ, ಅಜ್ಜಪ್ಪ ಮೆದೇಹಳ್ಳಿ, ಸಂಪತ್‌ಕುಮಾರ್, ಮಟ್ಟಿ ಹನುಮಂತಪ್ಪ, ಅರುಣ್, ನಾಗೇಶ್‌. ಬಸವರಾಜ ಹಂಪಯ್ಯನ ಮಾಳಿಗೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.