ADVERTISEMENT

ಹಿಂದಿ ಹೇರಿಕೆ ವಿರೋಧಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 11:54 IST
Last Updated 14 ಸೆಪ್ಟೆಂಬರ್ 2020, 11:54 IST
ಹಿಂದಿ ಭಾಷಾ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಹಿಂದಿ ಭಾಷಾ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಕೇಂದ್ರ ಸರ್ಕಾರ ಒತ್ತಾಯಪೂರ್ವಕವಾಗಿ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಸೋಮವಾರ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಪ್ರಧಾನ ಅಂಚೆ ಕಚೇರಿ ಎದುರು ಜಮಾಯಿಸಿದ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕನ್ನಡವನ್ನು ಅಂತರರಾಷ್ಟ್ರೀಯ ಭಾಷಾ ದಿನವನ್ನಾಗಿ ಆಚರಿಸುವಂತೆ ಒತ್ತಾಯಿಸಿದರು.

ಸೆ.14ರಂದು ಅಂತರರಾಷ್ಟ್ರೀಯ ಹಿಂದಿ ದಿನವನ್ನಾಗಿ ಆಚರಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿಗೆ ಎರಡು ಶತಮಾನಗಳ ಇತಿಹಾಸವಿದೆ. ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಕನ್ನಡವನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ’ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಮುಖಂಡರಾದ ಹರೀಶ್, ತಿಪ್ಪೇಸ್ವಾಮಿ, ವೀಣಾ ಗೌರಣ್ಣ, ಬಿ.ಅನಿಲ್, ವೆಂಕಟೇಶ್ ಇದ್ದರು.

ಒನಕೆ ಓಬವ್ವ ವೃತ್ತದಲ್ಲಿ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಮನವಿ ಪತ್ರ ಸಲ್ಲಿಸಿದರು.

‘ರಾಷ್ಟ್ರ ಭಾಷೆಯ ಸ್ಥಾನವನ್ನು ಸಂವಿಧಾನ ಕಲ್ಪಿಸಿಲ್ಲ. ಆಡಳಿತಾತ್ಮಕ ಭಾಷೆಯ ಹೆಸರಿನಲ್ಲಿ ಹಿಂದಿ ಹೇರಿಕೆ ಮಾಡುವ ಹುನ್ನಾರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಜನರ ತೆರಿಗೆ ಹಣದಲ್ಲಿ ಹಿಂದಿ ಭಾಷೆಗೆ ಉತ್ತೇಜನ ನೀಡುವ ಕೆಲಸ ಮಾಡುತ್ತಿದೆ. ಹಿಂದಿಯೇತರ ರಾಜ್ಯಗಳಿಗೆ ಇದರಿಂದ ತೊಂದರೆ ಉಂಟಾಗುತ್ತಿದೆ’ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಟಿ.ರಮೇಶ್‌ ದೂರಿದರು.

ಮುಖಂಡರಾದ ರಾಜಪ್ಪ, ಸಿ.ಎನ್‌.ಪ್ರಕಾಶ್‌, ವೆಂಕಟೇಶ್‌, ಲಕ್ಷ್ಮಣ್‌, ಗಣೇಶ್‌ ಸೇರಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.