ನಾಯಕನಹಟ್ಟಿ: ಕರ್ನಾಟಕ ಏಕೀಕರಣ ಹೋರಾಟಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಕೊಡುಗೆ ಅಪಾರವಾದದ್ದು ಎಂದು ಸಹಾಯಕ ಪ್ರಾಧ್ಯಾಪಕ ಜಿ.ವಿ.ರಾಜಣ್ಣ ಹೇಳಿದರು.
ಪಟ್ಟಣದ ವಿದ್ಯಾವಿಕಾಸ ಶಾಲೆಯಲ್ಲಿ ಸೋಮವಾರ ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು.
1915ರ ವೇಳೆಗೆ ಕನ್ನಡ ಭಾಷೆಯ ಅಸ್ಮಿತೆಯನ್ನು ಉಳಿಸಬೇಕು ಮತ್ತು ಬೆಳೆಸಬೇಕು ಎಂಬ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಲಾಯಿತು. ಅಂದಿನ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನರಾದ ಸರ್.ಎಂ.ವಿಶ್ವೇಶ್ವರಯ್ಯ, ಮಿರ್ಜಾ ಇಸ್ಮಾಯಿಲ್ ಅವರು ಈ ಸಂಸ್ಥೆಯನ್ನು ಸ್ಥಾಪಿಸಿ ಪ್ರವರ್ಧಮಾನಕ್ಕೆ ತಂದ ಮೂಲಪುರುಷರಾಗಿದ್ದಾರೆ. ಅಂದು ಹರಿದು ಹಂಚಿ ಹೋಗಿದ್ದ ಕನ್ನಡ ಭಾಷಿಕರನ್ನೆಲ್ಲಾ ಒಗ್ಗೂಡಿಸುವ ಕಾರ್ಯ ನಡೆದಿತ್ತು ಎಂದರು.
ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿ ರಾಘವೇಂದ್ರ ಮಾತನಾಡಿ, ‘ಜೆಮ್‌ಷಡ್‌ಜಿ ಟಾಟಾ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವದಿಂದಾಗಿ ನಮ್ಮ ಐಐಎಸ್‌ಸಿ ಉದಯವಾಯಿತು. ಮೈಸೂರಿನ ಮಹಾರಾಜರು ಅಂದು 410 ಎಕರೆ ಜಮೀನನ್ನು ನೀಡಿ ಐಐಎಸ್‌ಸಿಯನ್ನು ಆರಂಭಿಸಲು ಪ್ರೋತ್ಸಾಹಿಸಿದರು. ಮೈಸೂರಿನ ಮಹಾರಾಜರ ಅಂದಿನ ಕಾರ್ಯಗಳು ಶ್ಲಾಘನೀಯವಾಗಿವೆ. ನಾಲ್ವಡಿಯವರ ಭಾಷಾಭಿಮಾನದಿಂದ ಕಸಾಪ ಉದಯವಾಯಿತು’ ಎಂದರು.
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿದರು. ಕೋಶಾಧ್ಯಕ್ಷ ಚೌಳೂರು ಲೋಕೇಶ್, ಕಾರ್ಯದರ್ಶಿ ವಿ.ಧನಂಜಯ, ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಬಿ.ಎಂ.ತಿಪ್ಪೇರುದ್ರಸ್ವಾಮಿ, ಮುಖ್ಯ ಶಿಕ್ಷಕಿ ಎ.ಉಮಾ, ರೂಪಾ, ಡಿ.ಎಸ್.ಸುಜಯ್, ಕೌಸರ್‌ಭಾನು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.