ಹೊಳಲ್ಕೆರೆ: ‘ವಾರ್ಷಿಕ ₹ 3 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಬಡವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು, ಮಹಿಳೆಯರು, ಮಕ್ಕಳು, ಕಾರ್ಮಿಕರು ಮತ್ತು ಜೀತಕ್ಕೆ ಒಳಗಾದವರಿಗೆ ಉಚಿತ ಕಾನೂನು ಸಲಹೆ ಮತ್ತು ನೆರವು ನೀಡಲಾಗುವುದು’ ಎಂದು ತಹಶೀಲ್ದಾರ್ ವಿಜಯ ಕುಮಾರ್ ತಿಳಿಸಿದರು.
ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತದಿಂದ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ನಡೆದ ಲೋಕ ಅದಾಲತ್ ಕಾನೂನು ಅರಿವು, ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಕಾನೂನಿನ ಅರಿವು ಇರುವುದರಿಂದ ಅನ್ಯಾಯಕ್ಕೆ ಒಳಗಾಗುವುದು ಕಡಿಮೆಯಾಗುತ್ತದೆ. ದೌರ್ಜನ್ಯಕ್ಕೆ ಒಳಗಾದಾಗ ಕಾನೂನಿನ ಮೊರೆ ಹೋಗುವುದರಿಂದ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಲೋಕ ಅದಾಲತ್‌ನಲ್ಲಿ ಕಾನೂನು ಪ್ರಕರಣಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಬಹುದು’ ಎಂದರು.
ಪ್ಯಾನಲ್ ವಕೀಲ ಆರ್.ಹನುಮಂತಪ್ಪ, ಕಾನೂನು ಸೇವೆಗಳ ಪ್ರಾಧಿಕಾರದ ಧ್ಯೇಯೋದ್ದೇಶಗಳು ಮತ್ತು ಲೋಕ ಅದಾಲತ್ ಕುರಿತು ಉಪನ್ಯಾಸ ನೀಡಿದರು. ಸರ್ಕಾರಿ ಸಹಾಯಕ ಅಭಿಯೋಜಕಿ ಮಂಜುಳಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರದೀಪ್, ಸಹಾಯಕ ಕಾನೂನು ನೆರವು ಅಭಿರಕ್ಷಕ ಟಿ.ಮಧು, ವಕೀಲ ಪಿ.ಎಲ್.ಮೂಲೆಮನೆ, ನಿಲಯ ಪಾಲಕರು, ಹಾಸ್ಟೆಲ್ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.