ಹೊಳಲ್ಕೆರೆ: ಯುವಕರು ದೇಶದ ಅಭಿವೃದ್ಧಿ ಕುರಿತು ಚಿಂತಿಸಲಿ ಎಂದು ಸರ್ಕಾರಿ ಸಹಾಯಕ ಅಭಿಯೋಜಕರಾದ ಮಂಜುಳಾ ಸಲಹೆ ನೀಡಿದರು.
ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ದಾವಣಗೆರೆಯ ಸಂವಾದ ಯುವ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯುವ ಸಮೂಹ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಸಂವಿಧಾನದ ಬಗ್ಗೆ ತಿಳಿದುಕೊಳ್ಳಬೇಕು. ಯುವಶಕ್ತಿ ದೇಶದ ಶಕ್ತಿಯಾಗಿದ್ದು, ದೇಶವನ್ನು ಕಟ್ಟುವ ಕಾರ್ಯ ಮಾಡಬೇಕು ಎಂದು ಹೇಳಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರು, ಮಹಿಳೆಯರು, ಮಕ್ಕಳು, ಕಾರ್ಮಿಕರು, ಗುಂಪು ಘರ್ಷಣೆ, ಗಲಭೆ, ಪ್ರವಾಹ, ಭೂಕಂಪ, ಕೈಗಾರಿಕೆಗಳ ವಿನಾಶಕ್ಕೆ ತುತ್ತಾದವರು, ಮತೀಯ ದೌರ್ಜನ್ಯಕ್ಕೆ ಬಲಿಯಾದವರು, ಜೀತಕ್ಕೊಳಗಾದವರು, ವಾರ್ಷಿಕ ಆದಾಯ ₹ 3 ಲಕ್ಷಕ್ಕಿಂತ ಕಡಿಮೆ ಇರುವ ಎಲ್ಲಾ ವರ್ಗದ ಜನರಿಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕಾನೂನು ಉಚಿತ ಸಲಹೆ ಮತ್ತು ನೆರವನ್ನು ನೀಡಲಾಗುವುದು ಎಂದು ಪ್ಯಾನಲ್ ವಕೀಲರಾದ ಆರ್.ಹನುಮಂತಪ್ಪ ತಿಳಿಸಿದರು.
ಸಂವಾದ ಯುವ ಸಂಪನ್ಮೂಲ ಕೇಂದ್ರದ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ನೇತ್ರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಯುವ ಮಾರ್ಗದರ್ಶಕ ಮಂಜುನಾಥ್, ವಕೀಲ ಎಸ್.ವಿಜಯ್ ಕಾಲ್ಕೆರೆ, ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.