
ಚಿತ್ರದುರ್ಗ: ‘ಪ್ರಸಕ್ತ ವರ್ಷದ ಮೊದಲ ರಾಷ್ಟ್ರೀಯ ಲೋಕ್ ಅದಾಲತ್ ಮಾರ್ಚ್ 14ರಂದು ನಡೆಯಲಿದೆ. ಕಕ್ಷಿದಾರರು ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ್ ತಿಳಿಸಿದರು.
‘ಜಿಲ್ಲಾ ಕೇಂದ್ರ ಹಾಗೂ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಕಳೆದ ಮೆಗಾ ಲೋಕ ಅದಾಲತ್‍ನಲ್ಲಿ ಒಟ್ಟು 3,840 ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ 75,637 ಪ್ರಕರಣಗಳನ್ನು ಸೇರಿಸಿ ಒಟ್ಟು 79,477 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ ಒಟ್ಟು 7 ಜೋಡಿಗಳನ್ನು ಪುನಃ ಒಂದು ಮಾಡಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ– 2.0 ವಿಶೇಷ ಅಭಿಯಾನವನ್ನೂ ಆರಂಭ ಮಾಡಲಾಗಿದ್ದು, ಜ. 2ರಿಂದಲೇ ಕಾರ್ಯಾರಂಭ ಮಾಡಿದೆ. ಕಳೆದ ಬಾರಿಯ ಮಧ್ಯಸ್ಥಿಕೆ ಅಭಿಯಾನದಲ್ಲಿ ರಾಜ್ಯದಲ್ಲಿ 5,000ಕ್ಕೂ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಿವೆ. ಇದೀಗ 2ನೇ ಬಾರಿ ಆರಂಭವಾಗಿದ್ದು, ಜನವರಿ ತಿಂಗಳ ಅಂತ್ಯದವರೆಗೆ ಮಧ್ಯಸ್ಥಿಕೆಗೆ ಯೋಗ್ಯವಾದ ಪ್ರಕರಣಗಳನ್ನು ಗುರುತಿ ಕಳುಹಿಸಲಾಗುವುದು’ ಎಂದು ತಿಳಿಸಿದರು.
‘ಜಿಲ್ಲಾ ವ್ಯಾಪ್ತಿಯ 24 ನ್ಯಾಯಾಲಯಗಳಲ್ಲಿ ಮಧ್ಯಸ್ಥಿಕೆ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳನ್ನು ಗುರುತಿಸಿ, ಪ್ರತಿ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಇರುವ ಮಧ್ಯಸ್ಥಿಕೆ ಕೇಂದ್ರಕ್ಕೆ ರವಾನಿಸಲಾಗುತ್ತಿದೆ’ ಎಂದರು.
‘ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸದ್ಯ 51,026 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಪ್ರಸ್ತುತ ಜಿಲ್ಲೆಯ ಐದು ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಕೊರತೆ ಇದ್ದರೂ, ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಕರಣಗಳ ಶೀಘ್ರ ವಿಲೇವಾರಿಗೆ ಪ್ರಯತ್ನಿಸಲಾಗುತ್ತಿದೆ. ಮುಂಬರುವ ಲೋಕ್ ಅದಾಲತ್‍ಗಾಗಿ ಈಗಾಗಲೇ 6,480 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇದೇ ಜನವರಿ 17 ರವರೆಗೆ 798 ಪ್ರಕರಣಗಳು ಇತ್ಯರ್ಥಗೊಂಡಿವೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ’ ಎಂದರು.
‘ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಯಾವುದಾದರೂ ಪ್ರಶ್ನೆಗಳಿದ್ದರೆ ಇ-ಮೇಲ್ dlsachitradurga3@gmail.comಗೆ ಸಂಪರ್ಕಿಸಬಹುದು. ಸಹಾಯವಾಣಿ 15100 ಸಂಖ್ಯೆಯನ್ನೂ ಸಂಪರ್ಕಿಸಬಹುದು. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದಲ್ಲಿ ಇರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಚೇರಿಗೆ ಖುದ್ದಾಗಿ ಭೇಟಿ ಮಾಡಿ ತಮ್ಮ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದು’ ಎಂದರು.
‘ಜಿಲ್ಲೆಯಲ್ಲಿ ಪೋಕ್ಸೊ ಪ್ರಕರಣ ಹೆಚ್ಚುತ್ತಿರುವುದು ಆತಂಕಕಾರಿ. ಪೋಕ್ಸೊ ಕುರಿತು ಗ್ರಾಮ ಮಟ್ಟ, ತಾಲ್ಲೂಕು ಮಟ್ಟದಲ್ಲಿಯೂ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ನಾವು ಜಾಗೃತಿ ಮೂಡಿಸುತ್ತಿದ್ದೇವೆ’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.