ADVERTISEMENT

ಸಿದ್ದರಾಮಯ್ಯ ಅವರನ್ನ ಮುಟ್ಟಿದರೆ ಕ್ರಾಂತಿ ನಿಶ್ಚಿತ: ಎಂ.ಬಿ.ಪಾಟೀಲ

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 12:31 IST
Last Updated 23 ಆಗಸ್ಟ್ 2022, 12:31 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ಚಿತ್ರದುರ್ಗ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಅವರನ್ನು ಮುಟ್ಟುವ ಪ್ರಯತ್ನ ಮಾಡಿದರೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ನಡೆಯುವುದು ನಿಶ್ಚಿತ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದರು.

‘ಸಿದ್ದರಾಮಯ್ಯ ಅವರು ಯಾವುದಕ್ಕೂ ಹೆದರುವುದಿಲ್ಲ. ಅವರನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ’ ಎಂದು ಸಿದ್ದರಾಮಯ್ಯ ಅವರ ಜೀವಬೆದರಿಕೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

‘ಸಿದ್ದರಾಮಯ್ಯ ದೊಡ್ಡ ಶಕ್ತಿ. ಅವರು ಬೆರಳು ತೋರಿಸಿದರೆ ನೀವು (ಬಿಜೆಪಿ) ಮನೆಬಿಟ್ಟು ಹೊರಗೆ ಬರುವುದಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುವ ಸಿದ್ದರಾಮಯ್ಯ, ಬಿಜೆಪಿ ನಾಯಕರಷ್ಟು ಕೀಳಾಗಿ ಆಲೋಚನೆ ಮಾಡುವುದಿಲ್ಲ. ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ರಾಜ್ಯಸಭಾ ಸದಸ್ಯ ಜಗ್ಗೇಶ್‌ ಹಾಗೂ ಸಂಸದ ಪ್ರತಾಪಸಿಂಹ ಹಾಳು ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನರ ಹೊಟ್ಟೆ ತುಂಬಿಸುವ ಕೆಲಸ ಮಾಡಿದ್ದಾರೆ. ಅನ್ನಭಾಗ್ಯ, ಕ್ಷೀರಭಾಗ್ಯ ಕಲ್ಪಿಸಿ ಜನರ ನೋವಿಗೆ ಸ್ಪಂದಿಸಿದ್ದಾರೆ. ಬಿಜೆಪಿ ಸರ್ಕಾರ ಇದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮೊಟ್ಟೆ ಎಸೆತ, ಮಾಂಸಾಹಾರ, ಸಾವರ್ಕರ್‌ ಭಾವಚಿತ್ರದಂತಹ ವಿಷಯಗಳನ್ನು ಕೈಗೆತ್ತಿಕೊಂಡು ವಿವಾದ ಸೃಷ್ಟಿಸುತ್ತಿದೆ. ಇದರಿಂದ ಜನರ ಹುಟ್ಟೆ ತುಂಬುತ್ತದೆಯೇ’ ಎಂದು ಪ್ರಶ್ನಿಸಿದರು.

***

ಸಾವರ್ಕರ್‌ ಸ್ವಾತಂತ್ರ್ಯ ಹೋರಾಟಗಾರ ಎಂಬುದು ಐತಿಹಾಸಿಕ ಸತ್ಯ. ಜೈಲು ವಾಸ ಅನುಭವಿಸಿ ತಪ್ಪೊಪ್ಪಿಗೆ ಪತ್ರ ಬರೆದು ಬ್ರಿಟಿಷರಿಗೆ ಶರಣಾಗಿರುವುದು ಕೂಡ ವಾಸ್ತವ.
ಎಂ.ಬಿ.ಪಾಟೀಲ,ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.