ADVERTISEMENT

ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಬಸವ ಮಾಚಿದೇವ ಸ್ವಾಮೀಜಿ ಮನವಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2018, 10:29 IST
Last Updated 28 ಸೆಪ್ಟೆಂಬರ್ 2018, 10:29 IST

ಚಿತ್ರದುರ್ಗ: ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಮಡಿವಾಳ ಗುರುಪೀಠದ ಬಸವ ಮಾಚಿದೇವ ಸ್ವಾಮೀಜಿ ಮನವಿ ಮಾಡಿದರು.

‘ದೇಶದ 18 ರಾಜ್ಯಗಳಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ. ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಈ ಸೌಲಭ್ಯ ಸಿಕ್ಕಿಲ್ಲ. ಹೀಗಾಗಿ, ದೇಶವ್ಯಾಪಿ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಯುತ್ತಿದೆ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಮಡಿವಾಳ ಸಮುದಾಯ ರಾಜ್ಯದಲ್ಲಿ 15ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಶೇ 90ರಷ್ಟು ಜನ ಈಗಲೂ ಕುಲಕಸುಬು ನಂಬಿಕೊಂಡಿದ್ದಾರೆ. ಬಟ್ಟೆ ತೊಳೆಯುವ ಹಾಗೂ ಇಸ್ತ್ರಿ ಮಾಡುವ ಕೆಲಸ ಮಾಡುತ್ತಿದ್ದಾರೆ. ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಮೀಸಲಾತಿ ಸೌಲಭ್ಯ ಸಹಕಾರಿಯಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ಮಡಿವಾಳರ ಹೋರಾಟಕ್ಕೆ ಸ್ಪಂದಿಸಿದ ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನಕ್ಕೆ ಡಾ.ಅನ್ನಪೂರ್ಣಮ್ಮ ಸಮಿತಿ ನೇಮಕ ಮಾಡಿತ್ತು. ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕ ಸ್ಥಿತಿಯ ಬಗ್ಗೆ ಸಮಗ್ರ ಅಧ್ಯಯನ ನಡೆಸಿದ ಸಮಿತಿ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಶಿಫಾರಸು ಮಾಡಿದೆ. ವರದಿ ಸಲ್ಲಿಸಿ ನಾಲ್ಕು ವರ್ಷ ಕಳೆದರೂ ಸರ್ಕಾರ ಅಂಗೀಕರಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.