
ಚಿತ್ರದುರ್ಗದ: ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ದಂಪತಿ ವೈನಸ್ಸು ಮರೆತು ಒಂದಾದರು.
ವೈವಾಹಿಕ ವಿವಾದಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ರಾಜಿ, ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಯಿತು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯದಲ್ಲಿ ವೈವಾಹಿಕ ಜೀವನಕ್ಕೆ ಸಂಬಂಧಿಸಿದ ಒಂದು ಪ್ರಕರಣ 2022ರಲ್ಲಿ ದಾಖಲಾಗಿತ್ತು. 2023ನೇ ಸಾಲಿನ ದಾಖಲಾದ ಒಂದು ಪ್ರಕರಣ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ 2021ನೇ ಸಾಲಿನಲ್ಲಿ ದಾಖಲಾದ ಒಂದು ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಗೊಳಿಸಲಾಯಿತು.
ನ್ಯಾಯಾಧೀಶರು ಹಾಗೂ ವಕೀಲರ ಮನವೊಲಿಕೆಯಿಂದ ದಂಪತಿ ಮನಸ್ತಾಪ ಮರೆತು ರಾಜಿಯಾದರು. ಜೀವನದಲ್ಲಿ ಒಂದಾಗಿ ಬಾಳುತ್ತೇವೆ ಎಂದು ಪರಸ್ಪರ ಮಾತು ನೀಡಿದರು.
ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಡಿ.ಮಮತಾ, 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಚೈತ್ರಾ, ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.