
ಚಿತ್ರದುರ್ಗ: ‘ಪೋಷಕರು ತಮ್ಮ ಮಕ್ಕಳಿಗೆ ಕಲಿಕೆ ವಾತಾವರಣದ ಜತೆಗೆ ಉತ್ತೇಜನ ನೀಡಬೇಕು. ಅದು ಮಗುವಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ ಮುಂದಿನ ಸಾಧನೆಗೆ ದಾರಿ ದೀಪವಾಗುತ್ತದೆ’ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.
ನಗರದ ಕವಾಡಿಗರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ಪೋಷಕರು ಮಗುವಿನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಸೂಕ್ತವಾದ ದಾರಿಗಳನ್ನು ಕಂಡುಕೊಳ್ಳಬೇಕು’ ಎಂದರು.
‘ಮಗುವನ್ನು ಶಾಲೆಗೆ ದಾಖಲು ಮಾಡಿದ ನಂತರ ಮಾಸಿಕ ಸಭೆಯಲ್ಲಿ ಭಾಗವಹಿಸಬೇಕು. ಬೋಧನೆ ಹಾಗೂ ಕಲಿಕೆಯ ಕುರಿತು ಚರ್ಚಿಸಿ ಸೂಕ್ತ ಮಾಹಿತಿ ನೀಡಿದಾಗ ಶೈಕ್ಷಣಿಕ ಚಟುವಟಿಕೆ ಉತ್ತಮಪಡಿಸಲು ಸಹಕಾರಿ ಆಗುತ್ತದೆ’ ಎಂದು ತಿಳಿಸಿದರು.
‘ಸರ್ಕಾರದಿಂದ ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿ ವೇತನ, ಪೂರಕ ಪೌಷ್ಟಿಕ ಆಹಾರದಂಥ ಕಾರ್ಯಕ್ರಮಗಳ ಹಮ್ಮಿಕೊಂಡು ಮಕ್ಕಳ ದೈಹಿಕ ಹಾಗೂ ಆರೋಗ್ಯ ಬೆಳವಣಿಗೆಗೆ ಸಹಾಯ ಮಾಡುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಮುಂದಾಗಬೇಕು’ ಎಂದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ಕುಮಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಡಿವೈಪಿಸಿ ವೆಂಕಟೇಶಪ್ಪ, ಡಯಟ್ ಹಿರಿಯ ಉಪನ್ಯಾಸಕ ಎಸ್.ನಾಗಭೂಷಣ್, ಕ್ಷೇತ್ರ ಶಿಕ್ಷಣಾಧಿಕಾರಿ ಗಿರಿಜಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.