ADVERTISEMENT

ತಾಯಿ–ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೆ

ಕೋವಿಡ್‌ ಚಿಕಿತ್ಸೆಗೆ ಸಿದ್ಧತೆ, ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 17:02 IST
Last Updated 18 ಜುಲೈ 2021, 17:02 IST
ಜಿ.ಎಚ್‌. ತಿಪ್ಪಾರೆಡ್ಡಿ
ಜಿ.ಎಚ್‌. ತಿಪ್ಪಾರೆಡ್ಡಿ   

ಚಿತ್ರದುರ್ಗ: ಕೋವಿಡ್‌ನ ಸಂಭವನೀಯ ಮೂರನೇ ಅಲೆಗೆ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದು, ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ ಎಂದು ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯ ಇತ್ತು. ಇದನ್ನು 100 ಹಾಸಿಗೆಗೆ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಇದಕ್ಕೆ ₹ 10 ಕೋಟಿ ಅನುದಾನ ಸಿಕ್ಕಿದೆ. ಕಟ್ಟಡದ ಮೇಲ್ಬಾಗದ ಎರಡು ಮತ್ತು ಮೂರನೇ ಮಹಡಿಯಲ್ಲಿ ಹಾಸಿಗೆ ಹೆಚ್ಚಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಕೋವಿಡ್‌ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎನ್ನಲಾಗುತ್ತಿದೆ. ಮಕ್ಕಳಿಗೆ ತೊಂದರೆಯಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ₹ 1.20 ಕೋಟಿ ವೆಚ್ಚದಲ್ಲಿ 230 ಹಾಸಿಗೆಗಳಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ 41 ಹಾಸಿಗೆ, ಆಸ್ಪತ್ರೆಯ ಮುಖ್ಯ ಕಟ್ಟಡದಲ್ಲಿ 104 ಹಾಸಿಗೆಗಳಿಗೆ ಆಮ್ಲಜನಕ ಸೌಲಭ್ಯ ಸಿಗಲಿದೆ’ ಎಂದು ಹೇಳಿದರು.

ADVERTISEMENT

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಂಗನಾಥ್‌ ಮಾತನಾಡಿ, ‘ಜಿಲ್ಲೆಯಲ್ಲಿ 27 ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲಾಗುತ್ತಿದೆ. ಇದರಲ್ಲಿ 6 ಕೇಂದ್ರಗಳನ್ನು ಮಕ್ಕಳಿಗೆ ಮೀಸಲಿಡಲಾಗುತ್ತಿದೆ. ಜಿಲ್ಲೆಯಲ್ಲಿ ಮಕ್ಕಳಿಗಾಗಿ 600 ಹಾಸಿಗೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಪ್ರತಿ ತಾಲ್ಲೂಕು ಆಸ್ಪತ್ರೆ, ಏಳು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‌ ಚಿಕಿತ್ಸೆಗೆ ಒತ್ತು ನೀಡಲಾಗುತ್ತದೆ. ಮಕ್ಕಳಿಗೆ ಹಾಸಿಗೆ ಕಾಯ್ದಿರಿಸುವಂತೆ ಎಲ್ಲ ಆಸ್ಪತ್ರೆಗಳಿಗೂ ಸೂಚನೆ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.