ADVERTISEMENT

ಕೋವಿಡ್‌ ನೆಪದಲ್ಲಿ ಹಣ ವಸೂಲಿ: ಖಾಸಗಿ ಆಸ್ಪತ್ರೆ ವಿರುದ್ಧ ರಘು ಆಚಾರ್‌ ಕಿಡಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 9:38 IST
Last Updated 1 ಅಕ್ಟೋಬರ್ 2020, 9:38 IST
ರಘು ಆಚಾರ್
ರಘು ಆಚಾರ್   

ಚಿತ್ರದುರ್ಗ: ಕೋವಿಡ್‌ಗೆ ಚಿಕಿತ್ಸೆ ನೀಡುವ ನೆಪದಲ್ಲಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಿವೆ ಎಂದು ವಿಧಾನಪರಿಷತ್‌ ಸದಸ್ಯ ಜಿ.ರಘು ಆಚಾರ್‌ ಆರೋಪಿಸಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರ ಬರೆದಿರುವ ರಘು ಆಚಾರ್‌, ಕೊರೊನಾ ಸೋಂಕು ನಿಯಂತ್ರಣ ಕಾರ್ಯಪಡೆ ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

‘ರಾಜ್ಯದಲ್ಲಿ ನಿತ್ಯ ಸರಾಸರಿ ಏಳು ಸಾವಿರ ಕೋವಿಡ್‌ ಪ್ರಕರಣ ವರದಿಯಾಗುತ್ತಿವೆ. ಸೋಂಕು ನಿಯಂತ್ರಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ, ಸೂಕ್ತ ಚಿಕಿತ್ಸೆಯನ್ನೂ ನೀಡುತ್ತಿಲ್ಲ. ಇದರಿಂದ ಸಾವಿರಾರು ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕಕ್ಕಿಂತ ವಸೂಲಿ ಮಾಡಲಾಗುತ್ತಿದೆ. ಸರ್ಕಾರದ ನಿಯಮಗಳನ್ನು ಖಾಸಗಿ ಆಸ್ಪತ್ರೆಗಳು ಸ್ಪಷ್ಟವಾಗಿ ಉಲ್ಲಂಘಿಸುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಅರಸಿಕೆರೆ ಶಾಸಕ ಶಿವಲಿಂಗೇಗೌಡ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್‌ ಅವರು ಖಾಸಗಿ ಆಸ್ಪತ್ರೆಗೆ ಲಕ್ಷಾಂತರ ರೂಪಾಯಿ ತೆತ್ತಿರುವ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಬಹಿರಂಗವಾಗಿದೆ. ಜನಪ್ರತಿನಿಧಿಗಳ ಪರಿಸ್ಥಿತಿಯೇ ಹೀಗಾದರೆ ಸಾಮಾನ್ಯರ ಬದುಕು ಇನ್ನಷ್ಟು ದುರ್ಬರವಾಗಿರುವುದು ಸ್ಪಷ್ಟ. ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.