
ಮೊಳಕಾಲ್ಮುರು: ಪಟ್ಟಣದ ಕೃಷಿ ಇಲಾಖೆ ಬಳಿ ನಡೆಯುತ್ತಿರುವ ವಾರದ ಸಂತೆಯನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರ ಮಾಡಬೇಕು ಎಂದು ನಾಗರಿಕರು ಮನವಿ ಮಾಡಿದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮುಖ್ಯರಸ್ತೆ ಬದಿ ವಾರದ ಸಂತೆ ನಡೆಯುತ್ತಿದ್ದು, ಇದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಯಾವಾಗ ಬೇಕಾದರೂ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ಆದ್ದರಿಂದ ತಕ್ಷಣ ಸ್ಥಳಾಂತರ ಮಾಡಿ ಮೂಲಸೌಕರ್ಯ ಒದಗಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ ಲಿಂಗರಾಜ್, ‘ಈ ಬಗ್ಗೆ ತಕ್ಷಣವೇ ತಹಶೀಲ್ದಾರ್ ಬಳಿ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಪಟ್ಟಣವನ್ನು ಸಂಪರ್ಕಿಸುವ ನಾಲ್ಕು ದಿಕ್ಕುಗಳ ಮುಖ್ಯರಸ್ತೆಯಲ್ಲಿ ಸ್ವಾಗತ ಕಮಾನು ನಿರ್ಮಿಸಬೇಕು, ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಜತೆಗೆ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಬೇಕು, ಆವರಣದಲ್ಲಿ ವಾಹನಗಳು ಬೇಕಾಬಿಟ್ಟಿಯಾಗಿ ನಿಲ್ಲುವ ಸಮಸ್ಯೆಯನ್ನು ತಪ್ಪಿಸಬೇಕು ಎಂದರು.
ಈ ಬಜೆಟ್‌ನಲ್ಲಿ ಮೂಲಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಬೀದಿದೀಪ ಸೌಕರ್ಯಕ್ಕೆ ಆದ್ಯತೆ ನೀಡಲಾಗುವುದು. ಕೆಲ ವಾರ್ಡ್‌ಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಸೊಳ್ಳೆಗಳ ಕಾಟ ಹೆಚ್ಚಿ ರೋಗ ಭೀತಿ ಎದುರಾಗಿದೆ. ಸಾಯಿಬಾಬಾ ದೇವಸ್ಥಾನ ಬಳಿ ಚರಂಡಿ ಕಾಮಗಾರಿ ಸ್ಥಗಿತಗೊಂಡು ಸಮಸ್ಯೆ ಎದುರಾಗಿದೆ. ಈ ಬಗ್ಗೆ ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಾಧಿಕಾರಿ ಭರವಸೆ ನೀಡಿದರು.
ಮುಖಂಡರಾಡ ಡಿ.ಎಂ.ಈಶ್ವರಪ್ಪ, ಎಂ.ಡಿ. ಲತೀಫ್ ಸಾಬ್, ಒಬೇದುಲ್ಲಾ, ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.