ADVERTISEMENT

ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಸಂಸದ ಎ.ನಾರಾಯಣಸ್ವಾಮಿ

ನೇರ ರೈಲು ಮಾರ್ಗ ನಿರ್ಮಾಣಕ್ಕೆ ಒತ್ತು– ಬಿಜೆಪಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2019, 9:58 IST
Last Updated 2 ಜೂನ್ 2019, 9:58 IST
ಎ.ನಾರಾಯಣಸ್ವಾಮಿ
ಎ.ನಾರಾಯಣಸ್ವಾಮಿ   

ಚಿತ್ರದುರ್ಗ: ‘ಲೋಕಸಭಾ ಸದಸ್ಯನಾಗಿ ಆಯ್ಕೆಯಾದರೂ ನಾನೊಬ್ಬ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ. ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ’ ಎಂದು ನೂತನ ಸಂಸದ ಎ.ನಾರಾಯಣಸ್ವಾಮಿ ತಿಳಿಸಿದರು.

‘ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಾಗಿರುವ ರಾಜ್ಯದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಒಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ ಏಕೆ’ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೀಗೆ ಪ್ರತಿಕ್ರಿಯೆ ನೀಡಿದರು.

‘ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿದಿದ್ದೆ. ಪ್ರಜ್ಞಾವಂತ ಮತದಾರರು ಹಾಗೂ ವಿದ್ಯಾವಂತ ಯುವ ಸಮೂಹ ಅಭೂತಪೂರ್ವ ಬೆಂಬಲ ನೀಡಿದೆ. 80 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವುದಕ್ಕೆ ಹೆಮ್ಮೆ ಇದೆ. ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಐವರು ಶಾಸಕರ ವರ್ಚಸ್ಸು ಹಾಗೂ ಪಕ್ಷ ಸಂಘಟನೆಯ ಫಲವಾಗಿ ಗೆಲುವು ಸಿಕ್ಕಿದೆ. ಜನರ ಈ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ’ ಎಂದು ಆಶ್ವಾಸನೆ ನೀಡಿದರು.

ADVERTISEMENT

‘ಸ್ವಾತಂತ್ರೋತ್ತರ ಭಾರತದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯತೆ ಮುನ್ನೆಲೆಗೆ ಬಂದಿದೆ. ಬಿಜೆಪಿಯನ್ನು ಬೆಂಬಲಿಸುವ ಮೂಲಕ ಮತದಾರರು ದೇಶಭಕ್ತಿಯನ್ನು ಹೊರಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಐದು ವರ್ಷದ ಸಾಧನೆ ಹಾಗೂ ರಾಷ್ಟ್ರೀಯತೆಯ ಬಗ್ಗೆ ಹೊಂದಿರುವ ಭಾವನೆಯನ್ನು ಮೆಚ್ಚಿ ಬಿಜೆಪಿಗೆ ಜನಾದೇಶ ಸಿಕ್ಕಿದೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್‌.ನವೀನ್‌, ‘ಬಿಜೆಪಿಯ ಮೇಲೆ ಕ್ಷೇತ್ರದ ಮತದಾರರಿಗೆ ಬಹುದೊಡ್ಡ ನಿರೀಕ್ಷೆ ಇದೆ. ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಒತ್ತು ನೀಡಲಾಗುವುದು. ಮೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ಯೋಜನೆಯ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ. ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್‌ ಅಂಗಡಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕರ್ನಾಟಕದಿಂದ ಆಯ್ಕೆ ಆಗಿರುವುದರಿಂದ ಯೋಜನೆ ಜಾರಿ ತ್ವರಿತಗತಿಯಲ್ಲಿ ನಡೆಯಲಿದೆ’ ಎಂದು ಹೇಳಿದರು.

‘ನೇರ ರೈಲು ಮಾರ್ಗ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರುತ್ತಿಲ್ಲ. ಶೇ 50ರಷ್ಟು ಅನುದಾನ ನೀಡಬೇಕು ಎಂಬ ಒಡಂಬಡಿಕೆ ಇದ್ದರೂ, ಈವರೆಗೆ ಬಿಡಿಗಾಸು ಕೊಟ್ಟಿಲ್ಲ. ಯೋಜನೆಗೆ ಅಗತ್ಯವಿರುವ ಭೂಮಿಯನ್ನು ನೀಡುವ ಹೊಣೆ ರಾಜ್ಯ ಸರ್ಕಾರದ ಮೇಲಿದೆ. ಈವರೆಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಚಿತ್ರದುರ್ಗ ಜನರಿಗೆ ಹೆಚ್ಚು ಉಪಯುಕ್ತವಾಗಿರುವ ಈ ಯೋಜನೆಯ ಅನುಷ್ಠಾನಕ್ಕೆ ಬಿಜೆಪಿ ಶಕ್ತಿ ಮೀರಿ ಪ್ರಯತ್ನಿಸಲಿದೆ’ ಎಂದು ಭರವಸೆ ನೀಡಿದರು.

‘ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿದ್ದ ಪ್ರಕಾಶ್‌ ಜಾವಡೇಕರ್‌ ಅವರು ಚಿತ್ರದುರ್ಗಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡಿ ವರ್ಷಗಳೇ ಉರುಳಿವೆ. ಸೂಕ್ತ ಸ್ಥಳ ಲಭ್ಯವಾಗದ ಪರಿಣಾಮ ನನೆಗುದಿಗೆ ಬಿದ್ದಿರುವ ಕೇಂದ್ರೀಯ ವಿದ್ಯಾಲಯವನ್ನು ಶೀಘ್ರ ತೆರೆಯಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭ ಮಾಡಲಾಗುವುದು’ ಎಂದು ವಿವರಿಸಿದರು.

ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಂ.ಚಂದ್ರಪ್ಪ, ಬಿಜೆಪಿ ಮುಖಂಡರಾದ ಸಿದ್ದೇಶ್‌ ಯಾದವ, ರತ್ನಮ್ಮ, ಮಲ್ಲಿಕಾರ್ಜುನ, ಮಹಾಲಿಂಗಪ್ಪ, ನಾಗರಾಜ ಬೇದ್ರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.