
ನಾಯಕನಹಟ್ಟಿ: ದೇಸಿ ಕಲೆಗಳನ್ನು ಜೀವಂತವಾಗಿಡಲು, ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆಗಳನ್ನು ಪರಿಚಯಿಸಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹೇಳಿದರು.
ಹೋಬಳಿಯ ಅಬ್ಬೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ದೇಸಿ ಕಲೆಗಳು ಇನ್ನೂ ಜೀವಂತವಾಗಿವೆ ಎನ್ನುವುದಕ್ಕೆ ಇಲ್ಲಿನ ವಿದ್ಯಾರ್ಥಿಗಳು ಕೋಲಾಟ, ಯಕ್ಷಗಾನ ಕಲೆಗಳನ್ನು ಪ್ರದರ್ಶಿಸಿರುವುದೇ ಸಾಕ್ಷಿ. ಇಂತಹ ಕಲೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸರ್ಕಾರ ಉತ್ತಮ ಕಾರ್ಯಕ್ರಮ ರೂಪಿಸಿದೆ. ಕಳೆದ ವರ್ಷ ಅಬ್ಬೇನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ತಾಲ್ಲೂಕು ಮಟ್ಟದ ರಾಜ್ಯೋತ್ಸವದಲ್ಲಿ ಮುಖ್ಯಭಾಷಣ ಮಾಡಿ ಎಲ್ಲರ ಪ್ರಶಂಸೆಗೆ ಪಾತ್ರಳಾಗಿದ್ದಳು. ಅಂತಹ ಪ್ರತಿಭೆಗಳು ಈ ಮಣ್ಣಿನಲ್ಲಿವೆ ಎಂದರು.
ರಸಪ್ರಶ್ನೆ, ಕಂಠಪಾಠ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸಲು ಅನುಕೂಲವಾಗುತ್ತದೆ. ಸ್ಪರ್ಧೆ ಮುಖ್ಯ, ಸೋಲು ಗೆಲುವು ನಂತರದ ವಿಷಯ. ತೀರ್ಪುಗಾರರೂ ವಿದ್ಯಾರ್ಥಿಗಳನ್ನು ಸೂಕ್ಷ್ಮವಾಗಿ ಗಮನಿಸಿ ಅವರ ಪ್ರತಿಭೆಗೆ ತಕ್ಕ ತೀರ್ಪು ನೀಡಿ ಪ್ರೋತ್ಸಾಹಿಸಬೇಕು ಎಂದು ತಾಕೀತು ಮಾಡಿದರು.
ಆಧುನಿಕ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮಕ್ಕಳಿಗೆ ಸಿಕ್ಕ ಉತ್ತಮ ವೇಧಿಕೆ ಪ್ರತಿಭಾ ಕಾರಂಜಿ. ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಯನ್ನು ಪ್ರೋತ್ಸಾಹಿಸಿ ಅವರಿಗೆ ಮುಂದಿನ ಭವಿಷ್ಯಕ್ಕೆ ಮಾರ್ಗದರ್ಶನ ನೀಡುವಂತಹ ವೇದಿಕೆ ಇದಾಗಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಮಂಜುಬಾಬು ತಿಳಿಸಿದರು.
ಶಿಕ್ಷಣ ಸಂಯೋಜಕ ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗ್ರಾ.ಪಂ. ಸದಸ್ಯ ಟಿ.ಶೇಖರ್‌ಗೌಡ, ಮುಖಂಡ ಆನಂದಪ್ಪ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಈಶ್ವರಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕ ಕೊಟ್ರೇಶ್, ಎಸ್‌ಡಿಎಂಸಿ ಅಧ್ಯಕ್ಷ ಪಾಪಣ್ಣ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಗಟಕದ ಉಪಾಧ್ಯಕ್ಷ ಪಿ.ಎಂ.ವಿಶ್ವನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ಆರ್. ಸದಾಶಿವಯ್ಯ, ಸಮೂಹ ಸಂಪನ್ಮೂಲ ವ್ಯಕ್ತಿ ಜಿ. ಪಾಲಯ್ಯ, ಮಹಂತೇಶ್, ಜಕಣಾಚಾರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.