ADVERTISEMENT

ನಾಯಕನಹಟ್ಟಿ| ತಿಪ್ಪೇಸ್ವಾಮಿ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ: ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2023, 4:33 IST
Last Updated 27 ಫೆಬ್ರುವರಿ 2023, 4:33 IST
ನೇರಲಗುಂಟೆ ಗ್ರಾಮದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿಯವರ ನಿವಾಸದ ಬಳಿ ಭಾನುವಾರ ಸೇರಿದ ಜನಸ್ತೋಮ.
ನೇರಲಗುಂಟೆ ಗ್ರಾಮದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿಯವರ ನಿವಾಸದ ಬಳಿ ಭಾನುವಾರ ಸೇರಿದ ಜನಸ್ತೋಮ.   

ನಾಯಕನಹಟ್ಟಿ: ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರು ಕಾಂಗ್ರೆಸ್‌ನಿಂದ ಮರಳಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಬಿಜೆಪಿಗೆ ಮತ್ತು ಕಾರ್ಯಕರ್ತರಿಗೆ ದೊಡ್ಡಶಕ್ತಿ ಮತ್ತು ಸ್ಫೂರ್ತಿ ಬಂದತಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ
ಭಾನುವಾರ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದು ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಈ ಹಿನ್ನೆಲೆಯಲ್ಲಿ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕರಾಗಿ ಅಪಾರ ಸೇವೆ ಸಲ್ಲಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಸಮಸ್ಯೆಗಳಿಗೆ ಸ್ಪಂದಿಸಿರುವ ತಿಪ್ಪೇಸ್ವಾಮಿಯವರು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸಂತಸ ತಂದಿದೆ ಎಂದು ಹೇಳಿದರು.

ADVERTISEMENT

ದೇಶದಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ವಿರೋಧಿ ಅಲೆ ಹೆಚ್ಚಾಗಿದ್ದು, ಸಾವಿರಾರು ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ. ಅದರಂತೆ ತಿಪ್ಪೇಸ್ವಾಮಿ ಅವರು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಬಿಜೆಪಿ ತತ್ವಸಿದ್ಧಾಂತವನ್ನು ಮೆಚ್ಚಿ ಸೇರ್ಪಡೆಯಾಗಿದ್ದಾರೆ. ಅವರಿಗೆ ಮೊಳಕಾಲ್ಮುರು ಕ್ಷೇತ್ರದಿಂದ ಟಿಕೆಟ್ ನೀಡುವ ವಿಷಯವನ್ನು ಪಕ್ಷದ ವರಿಷ್ಠರು ನಿರ್ಧರಿಸಲಿದ್ದಾರೆ.
ಇನ್ನೂ ಅನೇಕ ನಾಯಕರು ಬಿಜೆಪಿ ಸೇರ್ಪಡೆಯಾಗಲಿದ್ದು, ಮುಂದಿನ ದಿನಗಳಲ್ಲಿ 130 ಸ್ಥಾನಗಳನ್ನು ಗೆದ್ದು ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಬಿಜೆಪಿಗೆ ಇಷ್ಟಪಟ್ಟು ಮರಳಿದ್ದೇನೆ. ಪಕ್ಷ ಟಿಕೆಟ್ ನೀಡುವ ಭರವಸೆ ಇದ್ದು, ಮುಂದಿನ ದಿನಗಳಲ್ಲಿ ಪಕ್ಷದ ಬಲಬರ್ಧನೆಗೆ ಶ್ರಮಿಸುತ್ತೇನೆ’ ಎಂದು ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ತಿಳಿಸಿದರು.

ಬಿಜೆಪಿ ಜಿಲ್ಲಾ ಅಧ್ಯಕ್ಷ ಎ. ಮುರಳಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಪಿ. ಶಿವಣ್ಣ, ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮಂಡಲ ಅಧ್ಯಕ್ಷರಾದ ಡಾ.ಪಿ.ಎಂ. ಮಂಜುನಾಥ, ಈ. ರಾಮರೆಡ್ಡಿ, ಮಲ್ಲೇಶ್, ಗೋವಿಂದ, ಎನ್. ಮಹಾಂತಣ್ಣ, ಶಿವದತ್ತ, ಸಿ.ಬಿ. ಮೋಹನ್‌ಕುಮಾರ್, ಬಿ. ರಾಜು ಇದ್ದರು.

ಹಲ್ಲೆ ಮಾಡಿದ ಸ್ಥಳದಲ್ಲೇ ಸನ್ಮಾನ

ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರಿಗೆ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು 2018ರಲ್ಲಿ ಪಟ್ಟಣದ ಗುರುತಿಪ್ಪೇರುದ್ರಸ್ವಾಮಿ ಒಳಮಠ ದೇವಾಲಯದ ಆವರಣದಲ್ಲಿ ಶ್ರೀರಾಮುಲು ಮೇಲೆ ಹಲ್ಲೆ ನಡೆಸಿ ದಾಂಧಲೆ ಸೃಷ್ಟಿಸಿದ್ದರು. ಆದರೆ, ಭಾನುವಾರ ಬೆಳಿಗ್ಗೆ ಅದೇ ಸ್ಥಳದಲ್ಲಿ ಇಬ್ಬರೂ ಜೊತೆಗೆ ಸಾಗಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹಳೆಯ ದ್ವೇಷವನ್ನು ಮರೆತು ಪರಸ್ಪರ ಒಗ್ಗಟ್ಟು ಪ್ರದರ್ಶಿಸಿದರು.

**

ಬಿಜೆಪಿ ಸರ್ಕಾರದ ಸಾಧನೆಗಳನ್ನು ಮೆಚ್ಚಿ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಪಕ್ಷ ಸೇರಿದ್ದಾರೆ. ವರಿಷ್ಠರ ಸೂಚನೆ ಮೇರೆಗೆ ಶ್ರೀರಾಮುಲು ಅವರು ಬೇರೆ ಜಿಲ್ಲೆಯಿಂದ ಸ್ಪರ್ಧಿಸಲು ತೆರಳುತ್ತಿದ್ದಾರೆ.

-ಜಿ.ಎಚ್. ತಿಪ್ಪಾರೆಡ್ಡಿ, ಶಾಸಕ

ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಬಿಜೆಪಿಗೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಆನೆ ಬಲ ಬಂದಂತಾಗಿದೆ. ರಾಜ್ಯದ ವರಿಷ್ಠರ ಸೂಚನೆಯ ಮೇರೆಗೆ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.

-ಕೆ.ಎಸ್. ನವೀನ್, ವಿಧಾನಪರಿಷತ್ ಸದಸ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.