ADVERTISEMENT

ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

ಕೋವಿಡ್‌ ಮುಕ್ತ ಜಿಲ್ಲೆಗೆ ವಿನೋತ್‌ ಪ್ರಿಯಾ ಹಾರೈಕೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 14:56 IST
Last Updated 29 ಜುಲೈ 2020, 14:56 IST
ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್‌.ಮನ್ನಿಕೇರಿ ಅವರು ಆರ್‌.ವಿನೋತ್‌ ಪ್ರಿಯಾ ಅವರಿಂದ ಬುಧವಾರ ಅಧಿಕಾರ ಸ್ವೀಕರಿಸಿದರು.
ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಕವಿತಾ ಎಸ್‌.ಮನ್ನಿಕೇರಿ ಅವರು ಆರ್‌.ವಿನೋತ್‌ ಪ್ರಿಯಾ ಅವರಿಂದ ಬುಧವಾರ ಅಧಿಕಾರ ಸ್ವೀಕರಿಸಿದರು.   

ಚಿತ್ರದುರ್ಗ: ಐಎಎಸ್‌ ಅಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅವರು ನೂತನ ಜಿಲ್ಲಾಧಿಕಾರಿಯಾಗಿ ಬುಧವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಹಸ್ತಾಂತರಿಸಿದ ಆರ್‌.ವಿನೋತ್‌ ಪ್ರಿಯಾ ಪುಷ್ಪಗುಚ್ಚ ನೀಡಿ ಶುಭ ಹಾರೈಸಿದರು.

ಮೂಲತಃ ಬಾಗಲಕೋಟೆ ಜಿಲ್ಲೆಯ ಹುನುಗುಂದ ತಾಲ್ಲೂಕಿನ ಕವಿತಾ ಅವರು ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಿಗೆರೆ ತಾಲ್ಲೂಕಿನ ಯಳಚಗೆರೆ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಕೆಎಎಸ್‌ ಅಧಿಕಾರಿಯಾಗಿ ನಾಗರಿಕ ಸೇವೆಗೆ ಸೇರಿದ ಬಳಿಕ ಸರ್ಕಾರದ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕೆಎಸ್‌ಆರ್‌ಟಿಸಿ ನಿರ್ದೇಶಕಿಯಾಗಿದ್ದ ಇವರನ್ನು ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿತ್ತು.

‘ಉತ್ತರ ಕರ್ನಾಟಕ ಭಾಗದಲ್ಲಿ ಕಾರ್ಯನಿರ್ವಹಿಸಿದ ಅನುಭವ ಹೆಚ್ಚಾಗಿದೆ. ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಲು ಹೆಮ್ಮೆ ಆಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿದರೆ ಕೋವಿಡ್‌ ಪ್ರಕರಣ ಚಿತ್ರದುರ್ಗದಲ್ಲಿ ಕಡಿಮೆ ಇವೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ತಮ ಕೆಲಸವಾಗಿದೆ’ ಎಂದು ಕವಿತಾ ಎಸ್‌.ಮನ್ನಿಕೇರಿ ಮೆಚ್ಚುಗೆ ವ್ಯಕ್ತಪಡಿಸಿದರು.

ADVERTISEMENT

ಅಧಿಕಾರ ಹಸ್ತಾಂತರಿಸಿದ ಆರ್‌.ವಿನೋತ್‌ ಪ್ರಿಯಾ, ‘ಕೋವಿಡ್‌ ನಿಯಂತ್ರಣದಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕರಿಸಿದ್ದಾರೆ. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಶ್ರಮದಿಂದ ಸೋಂಕು ಹರಡುವಿಕೆ ಕಡಿಮೆಯಾಗಿದೆ. ಚಿತ್ರದುರ್ಗ ಶೀಘ್ರ ಕೋವಿಡ್‌ ಮುಕ್ತ ಜಿಲ್ಲೆಯಾಗಲಿ’ ಎಂದರು.

‘ಯಾವುದೇ ಲೋಪ ಉಂಟಾಗದಂತೆ ಕಾರ್ಯನಿರ್ವಹಿಸಿದ್ದೇನೆ. ಚುನಾವಣೆ, ಬರ, ಪ್ರವಾಹ ಹಾಗೂ ಕೋವಿಡ್ ಸಂದರ್ಭದವನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಎಲ್ಲ ಸೂಚನೆಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲನೆ ಮಾಡಿದ್ದಾರೆ’ ಎಂದು ಹೇಳಿದರು.

ಜಿಲ್ಲಾಡಳಿತದ ಪರವಾಗಿ ವಿನೋತ್ ಪ್ರಿಯಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಉಪವಿಭಾಗಾಧಿಕಾರಿ ವಿ.ಪ್ರಸನ್ನ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಮಧುಸೂದನ್‌, ಬಿಸಿಎಂ ಅಧಿಕಾರಿ ಅವಿನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.