ADVERTISEMENT

ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ 11ಕ್ಕೆ

ಬಿಎಸ್‌ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:58 IST
Last Updated 3 ಜುಲೈ 2022, 2:58 IST
ಮಾರಸಂದ್ರ ಮುನಿಯಪ್ಪ
ಮಾರಸಂದ್ರ ಮುನಿಯಪ್ಪ   

ಚಿತ್ರದುರ್ಗ: ನಿವೃತ್ತ ನ್ಯಾ.ನಾಗಮೋಹನ್‌ ದಾಸ್‌ ವರದಿಯಂತೆ ಪರಿಶಿಷ್ಟ ಜಾತಿ, ಪಂಗಡಕ್ಕೆ ನ್ಯಾಯಸಮ್ಮತ ಹಾಗೂ ಸಂವಿಧಾನಬದ್ಧವಾಗಿ ಮೀಸಲಾತಿ ಹೆಚ್ಚಳ ಮಾಡುವಲ್ಲಿ ಸರ್ಕಾರ ನಿರಂತರ ವಿಳಂಬ ನೀತಿ ತೋರುತ್ತಿದೆ. ಆದ್ದರಿಂದ ಜುಲೈ 11 ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳಿಗೆ ಏಕಕಾಲಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಎಸ್‌ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ,‘ವರದಿಯಂತೆ ಪರಿಶಿಷ್ಟ ಜಾತಿಗೆ ಶೇ.15ರಿಂದ 17 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.3ರಿಂದ 7ಕ್ಕೆ ಮೀಸಲಾತಿ ಏರಿಕೆ ಮಾಡಿ ಆದೇಶಿಸುವಂತೆ ಆಗ್ರಹಿಸಿ ಫೆ.10 ರಿಂದ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. 143 ದಿನ ಕಳೆದರು ಸಹ ಸರ್ಕಾರ ಕೇವಲ ಭರವಸೆಯಲ್ಲೇ ಕಾಲದೂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಮುದಾಯಕ್ಕೆ ನ್ಯಾಯ ಸಿಗುವವರೆಗೂ ಸತ್ಯಾಗ್ರಹ ಕೈಬಿಡುವುದಿಲ್ಲ ಎಂದು ಸ್ವಾಮೀಜಿ ಪಟ್ಟು ಹಿಡಿದಿದ್ದಾರೆ. ಧರಣಿ 150 ದಿನ ತಲುಪುವಷ್ಟರಲ್ಲಿ ಸರ್ಕಾರ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ. ಅದರ ಎಲ್ಲ ಅನಾಹುತಗಳಿಗೂ ಸರ್ಕಾರವೇ ಹೊಣೆ’ ಎಂದರು.

ADVERTISEMENT

‘ಎಸ್ಸಿ, ಎಸ್ಟಿ ಸಮುದಾಯದ ಜನಸಂಖ್ಯೆ ಆಧಾರದ ಮೇಲೆ ನಾಗಮೋಹನ್‌ ದಾಸ್‌ ವರದಿ ಸಿದ್ಧಗೊಳಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಯಾವುದೇ ಕಾರಣ ನೀಡದೆ ಶಿಫಾರಸುಗಳನ್ನು ಜಾರಿಗೊಳಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಬೇಕಿದೆ’ ಎಂದು ಆಗ್ರಹಿಸಿದರು. ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಗಿರೀಶ್‌ ಓಬಯ್ಯನಹಟ್ಟಿ, ಜಿಲ್ಲಾ ಉಸ್ತುವಾರಿ ಡಾ.ಅಶೋಕ್‌ ಚಕ್ರವರ್ತಿ, ರಾಜ್ಯ ಕಾರ್ಯದರ್ಶಿ ಪ್ರಕಾಶ್‌, ವಾಲ್ಮಿಕಿ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಶ್ರೀನಿವಾಸ್‌, ಬಿ.ಕಾಂತ್‌ ರಾಜ್‌, ಯಶೋಧ, ಡಿಎಸ್‌ಎಸ್‌ ಮುಖಂಡ ಟಿ.ಡಿ.ರಾಜಗಿರಿ, ಕೊರಚ ಸಮುದಾಯದ ಮುಖಂಡ ಈ.ಶಿವಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.