ಪ್ರಜಾವಾಣಿ ವಾರ್ತೆ
ಹಿರಿಯೂರು: ಗ್ರಾಮೀಣ ಭಾಗದ ಬಡವರ ಪಾಲಿಗೆ ಸರ್ಕಾರಿ ಶಾಲೆಗಳು ವಿದ್ಯೆ ಕಲಿಸಿದ ದೇವಾಲಯಗಳು. ಇಂತಹ ಶಾಲೆಗಳು ಮುಚ್ಚದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಗ್ರಾಮಸ್ಥರು, ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಮೇಲಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಘುನಾಯ್ಕ ತಿಳಿಸಿದರು.
ತಾಲ್ಲೂಕಿನ ಪಟ್ರೇಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ 2025–26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಖಾಸಗಿ ಶಾಲೆಗಳ ಭರಾಟೆಯಿಂದಾಗಿ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದೆ. ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಇದೆ ಎಂದು ಸರ್ಕಾರವು ಶಾಲೆಗಳನ್ನು ಮುಚ್ಚುತ್ತಾ ಹೋದರೆ ಲಕ್ಷಾಂತರ ಮಕ್ಕಳಿಗೆ ಅಕ್ಷರ ಕಲಿಸಿದ ಸರ್ಕಾರಿ ಶಾಲೆಗಳು ಇತಿಹಾಸದ ಪುಟ ಸೇರುತ್ತವೆ. ಖಾಲಿ ಇರುವ ಶಿಕ್ಷಕರ ಹುದ್ದೆ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಪಾಲಕರು ಸರ್ಕಾರಿ ಶಾಲೆಗಳ ಬಗ್ಗೆ ಹೊಂದಿರುವ ನಕಾರಾತ್ಮಕ ಧೋರಣೆ ಕೈಬಿಡಬೇಕು’ ಎಂದು ಅವರು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸುಜಾತಾ, ಎಸ್‌ಡಿಎಂಸಿ ಅಧ್ಯಕ್ಷ ವೈ.ಮಹೇಶ್, ಸದಸ್ಯರಾದ ಕೃಷ್ಣನಾಯ್ಕ, ಸಿದ್ದಮ್ಮ, ಪಾಲಕರು, ಶಿಕ್ಷಕರು ಉಪಸ್ಥಿತರಿದ್ದರು. ಅತಿಥಿಗಳು ಹೂ ಮತ್ತು ಸಿಹಿ ನೀಡುವ ಮೂಲಕ ಮಕ್ಕಳನ್ನು ಬರಮಾಡಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.