ADVERTISEMENT

ಹಿರಿಯೂರು: ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ನೋಡೆಲ್‌ ಅಧಿಕಾರಿಗಳ ನೇಮಕ

​ಪ್ರಜಾವಾಣಿ ವಾರ್ತೆ
Published 21 ಜುಲೈ 2023, 13:07 IST
Last Updated 21 ಜುಲೈ 2023, 13:07 IST
ಹಿರಿಯೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ತಹಶೀಲ್ದಾರ್‌ ಪ್ರಶಾಂತ್ ಕೆ. ಪಾಟೀಲ ಮಾತನಾಡಿದರು
ಹಿರಿಯೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ತಹಶೀಲ್ದಾರ್‌ ಪ್ರಶಾಂತ್ ಕೆ. ಪಾಟೀಲ ಮಾತನಾಡಿದರು    

ಹಿರಿಯೂರು: ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅನುಕೂಲವಾಗಲೆಂದು ನೋಡೆಲ್‌ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಹಶೀಲ್ದಾರ್‌ ಪ್ರಶಾಂತ್ ಕೆ. ಪಾಟೀಲ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತಾಲ್ಲೂಕುಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸುವ ಪ್ರಕ್ರಿಯೆ ಜುಲೈ 19ರಿಂದ ಪ್ರಾರಂಭವಾಗಿದ್ದು, ಈ ಸಂಬಂಧ ಕಸಬಾ ಹೋಬಳಿ ನೋಡೆಲ್‌ ಅಧಿಕಾರಿಯಾಗಿ ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ರಾಮಕೃಷ್ಣಪ್ಪ, ಧರ್ಮಪುರ ಹೋಬಳಿಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಉಲ್ಫತ್ ಜೈಬ, ಐಮಂಗಲ ಹೋಬಳಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿನೇಶ್, ಜೆಜೆ ಹಳ್ಳಿ ಹೋಬಳಿಗೆ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಚಿತ್ರಲಿಂಗಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ತಹಶೀಲ್ದಾರ್‌ ತಿಳಿಸಿದರು.

ADVERTISEMENT

‘ಒಂದು ಸಾವಿರ ಫಲಾನುಭವಿಗಳಿಗೆ ಇಬ್ಬರು ಪ್ರಜಾ ಪ್ರತಿನಿಧಿಗಳನ್ನು ನೇಮಕ ಮಾಡಲಾಗುತ್ತದೆ. ಒಂದು ಕೇಂದ್ರದಲ್ಲಿ ದಿನಕ್ಕೆ 50 ಮಂದಿ ಮಾತ್ರ ತಮ್ಮ ಹೆಸರು ನೋದಾಯಿಸಿಕೊಳ್ಳಲು ಅವಕಾಶ ಇರುತ್ತದೆ. ತಾಲ್ಲೂಕಿನಲ್ಲಿ ಒಟ್ಟು 72 ಕೇಂದ್ರಗಳಿದ್ದು, ಅದರಲ್ಲಿ 38 ಗ್ರಾಮ ಒನ್ ಕೇಂದ್ರಗಳು, 33 ಬಾಪೂಜಿ ಕೇಂದ್ರಗಳು ಹಾಗೂ ನಗರದಲ್ಲಿ ಒಂದು ಕರ್ನಾಟಕ ಒನ್ ಕೇಂದ್ರದಲ್ಲಿ ನೋಂದಣಿ ಕಾರ್ಯ ಪ್ರಗತಿಯಲ್ಲಿದೆ’ ಎಂದು ಪ್ರಶಾಂತ್ ಪಾಟೀಲ್ ಮಾಹಿತಿ ನೀಡಿದರು.

‘ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ, ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುವವರಾಗಿದ್ದಲ್ಲಿ ನೋಂದಣಿಗೆ ಅವಕಾಶ ಇರುವುದಿಲ್ಲ. ಫಲಾನುಭವಿಯು ಆಧಾರ್‌ ಚೀಟಿಗೆ ತಮ್ಮ ಮೊಬೈಲ್‌ ಸಂಖ್ಯೆಯನ್ನು ಜೋಡಿಸಿರಬೇಕು’ ಎಂದು ವಿವರಿಸಿದರು.

ಸಭೆಯಲ್ಲಿ ನಗರಸಭೆ ಪೌರಾಯುಕ್ತ ಮಹಾಂತೇಶ್, ತಾಲ್ಲೂಕು ಪಂಚಾಯಿತಿ ಇಒ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.