ADVERTISEMENT

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; NSS ವಿದ್ಯಾರ್ಥಿಗಳಿಂದ ಅರಿವು: ಜಿಲ್ಲಾಧಿಕಾರಿ

ಸಚಿವರೊಂದಿಗೆ ವಿಡಿಯೊ ಸಂವಾದ ಸಭೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 2:05 IST
Last Updated 7 ಸೆಪ್ಟೆಂಬರ್ 2025, 2:05 IST

ಚಿತ್ರದುರ್ಗ: ‘ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸೆ.22ರಿಂದ ಆರಂಭವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೆ.10ರಿಂದ 19ರವರೆಗೆ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಮನೆಮನೆಗೆ ಭೇಟಿ ನೀಡಿ ಸಮೀಕ್ಷೆಗೆ ಅಗತ್ಯವಿರುವ ದಾಖಲೆಗಳನ್ನು ಸಾರ್ವಜನಿಕರು ಸಿದ್ಧಪಡಿಸಿ ಇಟ್ಟುಕೊಳ್ಳುವಂತೆ ಅರಿವು ಮೂಡಿಸಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಶನಿವಾರ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ನಡೆಸಿದ ವಿಡಿಯೊ ಸಂವಾದದಲ್ಲಿ ಪಾಲ್ಗೊಂಡು, ನಂತರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ  ರಾಜ್ಯದ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಕಾರ್ಯವಾಗಿದೆ. ರಾಜ್ಯದ ನೀತಿ ನಿರೂಪಣೆಯನ್ನು ಕೈಗೊಳ್ಳಲು ಇದು ಆಧಾರವಾಗಿರುತ್ತದೆ. ಸಮೀಕ್ಷೆ ಕಾರ್ಯ ಈ ನಾಡಿನ ಸೇವೆಯ ಭಾಗವಾಗಿದೆ. ಸಮೀಕ್ಷಾ ಕಾರ್ಯ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಮ್ಮ ನಿಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಿದೆ. ಇದಕ್ಕಾಗಿ ಬದ್ಧತೆಯಿಂದ ಕೆಲಸ ಮಾಡಬೇಕಾದ ಅವಶ್ಯಕತೆ ಇದೆ’ ಎಂದರು.

ADVERTISEMENT

‘ಶಿಕ್ಷಕರಿಂದ ಮನೆ ಮನೆ ಸಮೀಕ್ಷೆ ಸೆ.22ರಿಂದ ಆರಂಭವಾಗಿ ಅ.7ರವರೆಗೂ ನಡೆಯಲಿದೆ. ರಾಜ್ಯದ ಅಂದಾಜು 2 ಕೋಟಿ ಮನೆಗಳ ಸಮೀಕ್ಷೆ ಕೈಗೊಳ್ಳಬೇಕಾಗಿದೆ. ಗಣತಿದಾರರಿಗೆ ಯಾವೆಲ್ಲ ಮಾಹಿತಿ ಹಾಗೂ ದಾಖಲೆಗಳನ್ನು ಸಾರ್ವಜನಿಕರು ಸಿದ್ಧ ಮಾಡಿಟ್ಟುಕೊಳ್ಳಬೇಕು ಎಂಬ ಬಗ್ಗೆ ಎನ್‌ಎಸ್‌ಎಸ್‌ ಸ್ವಯಂ ಸೇವಕರು ಮನೆಮನೆಗೆ ಭೇಟಿ ನೀಡಿ ಮಾಹಿತಿ ನೀಡಲಿದ್ದಾರೆ’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳ ಮೂಲಕ ಕುಟುಂಬ ಸದಸ್ಯರಿಗೆ ಸಾಕಷ್ಟು ಮುಂಚಿತವಾಗಿ ಅರಿವು ಮೂಡಿಸಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಜಿಲ್ಲೆಯ ಎಲ್ಲಾ ಕಾಲೇಜುಗಳ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ಇತರೆ ವಿದ್ಯಾರ್ಥಿಗಳೂ ಸ್ವಯಂ ಪ್ರೇರಿತವಾಗಿ ಜನರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ಭಾಗಿಯಾಗಬಹುದಾಗಿದೆ’ ಎಂದು ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಪ್ರತಿಯೊಂದು ಕುಟುಂಬದ ಸಮೀಕ್ಷೆ ನಡೆಸಬೇಕು. ಅಲೆಮಾರಿ, ಅರೆ ಅಲೆಮಾರಿ, ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನೂ ಸಮೀಕ್ಷೆ ವ್ಯಾಪ್ತಿಗೆ ತರಬೇಕು. ಯಾವ ಕುಟುಂಬವೂ ಕೂಡ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನಾವಳಿವೆ. ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದ ಮೇಲೆ ಸಮೀಕ್ಷೆ ಕಾರ್ಯ ನಡೆಯಲಿದೆ’ ಎಂದು ಹೇಳಿದರು.

‘ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಪಡಿತರ ಚೀಟಿ, ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಸಂಖ್ಯೆ, ಅಂಗವಿಕಲರಾಗಿದ್ದರೆ ಯುಐಡಿ ಕಾರ್ಡ್ ಅಥವಾ ಅಂಗವಿಕಲ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ ಸಿದ್ಧವಾಗಿ ಇಟ್ಟುಕೊಂಡಿರಬೇಕು. ಇದರಿಂದ ಸಮೀಕ್ಷೆ ಕಾರ್ಯ ಸುಲಭ ಮತ್ತು ವೇಗವಾಗಿ ನಡೆಸಲು ಸಾಧ್ಯವಾಗುತ್ತದೆ. ಕುಟುಂಬದ ಎಲ್ಲಾ ಸದಸ್ಯರಗಳ ಆಧಾರ್ ಕಾರ್ಡ್‌ಗಳು ಯಾವ ಮೊಬೈಲ್ ಸಂಖ್ಯೆಗೆ ಲಿಂಕ್ ಆಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದರು.

‘ಸಮೀಕ್ಷೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿರುವುದರಿಂದ ಆಧಾರ್ ಕಾರ್ಡ್ ಇಲ್ಲದಿದ್ದಲ್ಲಿ ಕೂಡಲೇ ಹತ್ತಿರದ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ, ನೋಂದಣಿ ಮಾಡಿಸಿ ಅದರ ಸಂಖ್ಯೆಯನ್ನು ಪಡೆಯಬೇಕು. ಆಧಾರ್ ಕಾರ್ಡ್ ಇದ್ದು, ಲಿಂಕ್ ಆಗಿರುವ ಮೊಬೈಲ್ ಫೋನ್ ನಂಬರ್ ಇಲ್ಲದಿದ್ದರೆ, ಹತ್ತಿರದ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ, ಪ್ರಸ್ತುತ ಬಳಸುತ್ತಿರುವ ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಿಸಿಕೊಳ್ಳಬೇಕು’ ಎಂದು ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ಡಿಡಿಪಿಐ ಎಂ.ಆರ್‌. ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.