ಹಿರಿಯೂರು: ‘ಶಿಕ್ಷಣ ಕ್ಷೇತ್ರ ಪ್ರಸ್ತುತ ಬಹುದೊಡ್ಡ ಉದ್ಯಮವಾಗಿದ್ದು, ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದರೆ, ಬೆರಳೆಣಿಕೆಯಷ್ಟು ಮಾತ್ರ ಇಂದಿಗೂ ಸೇವೆಗೆ ಮೀಸಲಾಗಿದ್ದು, ಅದರಲ್ಲಿ ಬಾಪೂಜಿ ವಿದ್ಯಾ ಸಂಸ್ಥೆಯು ಒಂದಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದ ಮೈಸೂರು ರಸ್ತೆಯಲ್ಲಿರುವ ಬಾಪೂಜಿ ಸಂಸ್ಥೆಯ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಬಾಪೂಜಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಬಾಪೂಜಿ ಉತ್ಸವ ಹಾಗೂ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
‘ಉದ್ಯೋಗಾಧಾರಿತ ಶಿಕ್ಷಣ ಪಡೆಯವುದು ಬಡ ಹಾಗೂ ಮಧ್ಯಮ ವರ್ಗದವರಿಗೆ ದೊಡ್ಡ ಸವಾಲಾಗಿದೆ. ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕೋರ್ಸ್‌ಗಳಿಗೆ ತುಂಬಾ ಬೇಡಿಕೆ ಇದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಕೇಳುವ ವಂತಿಗೆ ಭರಿಸಲು ಬಡವರಿಗೆ ಸಾಧ್ಯವಾಗದು. ಇಂತಹ ಸನ್ನಿವೇಶದಲ್ಲಿ ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಶುಲ್ಕ ಪಡೆದು ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಸಂಸ್ಥೆಯ ಸಂಸ್ಥಾಪಕ ಜಿ.ಎಸ್. ಮಂಜುನಾಥ್ ಅವರ ನಡೆ ಎಲ್ಲರಿಗೂ ಮಾದರಿ’ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಬಾಪೂಜಿ ಸಂಸ್ಥೆಯ ಸಂಸ್ಥಾಪಕ ಜಿ.ಎಸ್. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರಮಾಣವಚನವನ್ನು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನಿರಂಜನ್ ಬೋಧಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಉಪಾಧ್ಯಕ್ಷೆ ಎಚ್. ಮಂಜುಳಾ, ಸದಸ್ಯ ಈರಲಿಂಗೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ವೀಣಾ ಮಂಜುನಾಥ್, ಆಡಳಿತಾಧಿಕಾರಿ ಆರ್. ಮಂಜುನಾಥ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.