ADVERTISEMENT

‘ಆಡಳಿತ ವಿಕೇಂದ್ರೀಕರಣ ಬಿಜೆಪಿಗೆ ಗೊತ್ತಿಲ್ಲ‘

ಕೆಪಿಸಿಸಿ ವಕ್ತಾರ ಬಿ.ಎನ್‌.ಚಂದ್ರಪ್ಪ ಆರೋಪ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 14:12 IST
Last Updated 18 ಡಿಸೆಂಬರ್ 2020, 14:12 IST
ಬಿ.ಎನ್‌.ಚಂದ್ರಪ್ಪ
ಬಿ.ಎನ್‌.ಚಂದ್ರಪ್ಪ   

ಚಿತ್ರದುರ್ಗ: ಗ್ರಾಮ ಪಂಚಾಯಿತಿಯೂ ಸೇರಿದಂತೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಆಡಳಿತ ವಿಕೇಂದ್ರೀಕರಣ ವ್ಯವಸ್ಥೆಯ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ. ಗ್ರಾಮೀಣ ಭಾರತವನ್ನು ಬಿಜೆಪಿ ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಬಿ.ಎನ್‌.ಚಂದ್ರಪ್ಪ ಆರೋ‍ಪಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ರಾಜೀವಗಾಂಧಿ ಅವರು ಆಡಳಿತ ವಿಕೇಂದ್ರೀಕರಣ ವ್ಯವಸ್ಥೆ ರೂಪಿಸಿದರು. ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಿದರು. ಡಾ.ಮನಮೋಹನ್‌ ಸಿಂಗ್‌ ನೇತೃತ್ವದ ಯುಪಿಎ ಸರ್ಕಾರ ನರೇಗಾ ಯೋಜನೆ ಅನುಷ್ಠಾನಗೊಳಿಸಿ ಹಳ್ಳಿ ಅಭಿವೃದ್ಧಿಗೆ ಶ್ರಮಿಸಿತು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯಮಿ ಅಂಬಾನಿ ಹಾಗೂ ಅದಾನಿ ಅವರಿಗೆ ದೇಶ ಒತ್ತೆ ಇಡುತ್ತಿದೆ’ ಎಂದು ದೂರಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಅವಧಿಯಲ್ಲಿ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿದ ಕಾಯ್ದೆಗಳ ವಿರುದ್ಧ ರೈತರು ಹೋರಾಟಕ್ಕೆ ಇಳಿದಿದ್ದಾರೆ. ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಬೀಡುಬಿಟ್ಟಿದ್ದಾರೆ. 25ರೈತರು ಚಳಿಗೆ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಪ್ರಧಾನಿ ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಸರ್ಕಾರದ ವಿರುದ್ಧ ಧ್ವನಿ ಎತ್ತಿದ ಕಾರಣಕ್ಕೆ ರೈತರನ್ನು ಅವಮಾನ ಮಾಡಲಾಗುತ್ತಿದೆ’ ಎಂದು ಕಿಡಿಕಾರಿದರು.

ADVERTISEMENT

‘ನರೇಗಾ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ತಡೆಹಿಡಿಯಲಾಗಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾಲು ರಾಜ್ಯಕ್ಕೆ ನೀಡದೇ ಸಾಲ ಪಡೆಯುವ ಸಲಹೆ ನೀಡಲಾಗಿದೆ. ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಸಂಸದರು ತುಟಿ ಬಿಚ್ಚುತ್ತಿಲ್ಲ. ಆದರೆ, ಜನರ ಕೋಮುಭಾವನೆ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ. ಜನ ಇದನ್ನು ಸಹಿಸುವುದಿಲ್ಲ’ ಎಂದು ಹೇಳಿದರು.

‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಡಳಿತದಲ್ಲಿ ರಾಜ್ಯ ಇನ್ನಷ್ಟು ಅಧೋಗತಿಗೆ ಇಳಿಯುತ್ತಿದೆ. ಜನರು ಸಂಕಷ್ಟದಲ್ಲಿ ಇರುವಾಗ ಜಾತಿಗೊಂದು ನಿಗಮ ಸ್ಥಾಪಿಸಿ ಬೊಕ್ಕಸ ಖಾಲಿ ಮಾಡಲಾಗುತ್ತಿದೆ. ಎಲ್ಲೆಡೆ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದ ಐದು ವರ್ಷದಲ್ಲಿ 160 ಯೋಜನೆಗಳನ್ನು ರಾಜ್ಯಕ್ಕೆ ನೀಡಿದರು. ಯಡಿಯೂರಪ್ಪ ಅವರು ರಾಜ್ಯಕ್ಕೆ ಏನು ಕೊಟ್ಟಿದ್ದಾರೆ ಎಂಬುದನ್ನು ತಿಳಿಸಬೇಕು’ ಎಂದು ಒತ್ತಾಯಿಸಿದರು.

‘ಕಾಂಗ್ರೆಸ್‌ ಸರ್ಕಾರ ಅಧಿಕಾರದಲಿದ್ದಾಗ ಹಾಗೂ ನಾನು ಸಂಸದನಾಗಿದ್ದಾಗ ಬಿಡುಗಡೆಯಾದ ಅನುದಾನದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗಳು ಚಿತ್ರದುರ್ಗ ನಗರದಲ್ಲಿ ನಡೆಯುತ್ತಿವೆ.ಎಚ್‌.ಆಂಜನೇಯ ಅವರು ಸಚಿವರಾಗಿದ್ದ ಅವಧಿಯಲ್ಲಿ ಜಿಲ್ಲೆಗೆ ಕೋಟ್ಯಂತರ ರೂಪಾಯಿ ಅನುದಾನ ತಂದರು. ಸಂಸದನಾಗಿದ್ದ ಅವಧಿಯಲ್ಲಿ ಬಿಡುಗಡೆಯಾದ ಅನುದಾನದ ಕಾಮಗಾರಿ ಈಗಲೂ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಎಷ್ಟು ಅನುದಾನ ಬಂದಿದೆ’ ಎಂದು ಪ್ರಶ್ನಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಕೆಪಿಸಿಸಿ ಸದಸ್ಯ ಹನುಮಲಿ ಷಣ್ಮುಖಪ್ಪ, ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಎಸ್‌.ಮಂಜುನಾಥ್‌, ಮುಖಂಡರಾದ ಸಂಪತ್‌ಕುಮಾರ್‌, ಮೈಲಾರಪ್ಪ ಇದ್ದರು.

* ಕಾಂಗ್ರೆಸ್‌ ಅಧಿಕಾರದಲ್ಲಿದ್ದ ಅವಧಿಯಲ್ಲಿ ಭದ್ರಾ ಮೇಲ್ದಂಡೆಯ ಕಾಮಗಾರಿ ನಿರ್ಣಾಯಕ ಹಂತ ತಲುಪಿತ್ತು. ನೀರು ಹರಿಯುವ ಸಂದರ್ಭದಲ್ಲಿ ಬಂದ ಕೆಲವರು ಸೇತುವೆ ಬಳಿ ನಿಂತು ಪೋಸು ನೀಡುತ್ತಿದ್ದಾರೆ.

–ಬಿ.ಎನ್‌.ಚಂದ್ರಪ್ಪ, ಮಾಜಿ ಸಂಸದ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.