ADVERTISEMENT

ಪಿಎಸ್‌ಐ ಆಯ್ಕೆಪಟ್ಟಿ ರದ್ದತಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 9 ಮೇ 2022, 11:34 IST
Last Updated 9 ಮೇ 2022, 11:34 IST

ಚಿತ್ರದುರ್ಗ: ಅಕ್ರಮ ಆರೋಪದ ಮೇರೆಗೆ ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸಿದ ಸರ್ಕಾರದ ಕ್ರಮ ಸರಿಯಿಲ್ಲ. ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿ ಆಯ್ಕೆಯಾಗಿದ್ದ ಗ್ರಾಮೀಣ ಪ್ರದೇಶದ ಬಡ ಅಭ್ಯರ್ಥಿಗಳಿಗೆ ಇದರಿಂದ ಅನ್ಯಾಯವಾಗಿದೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ.ಜಿ.ಎನ್‌.ಮಲ್ಲಿಕಾರ್ಜುನಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಕ್ರಮ ಮಾರ್ಗದ ಮೂಲಕ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದವರನ್ನು ಪತ್ತೆ ಮಾಡಿ ಹೊರಗಿಡಲು ಅವಕಾಶವಿದೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು. ಹೈಕೋರ್ಟ್‌ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಹಲವು ವರ್ಷಗಳ ಇತಿಹಾಸವಿದೆ. ಪ್ರತಿ ನೇಮಕಾತಿ ಪ್ರಕ್ರಿಯೆಯಲ್ಲಿ ಇಂತಹ ಆರೋಪಗಳು ಕೇಳಿಬಂದಿವೆ. ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆದ ಬಳಿಕ ಯಾರೊಬ್ಬರಿಗೂ ಶಿಕ್ಷೆಯಾಗಿಲ್ಲ. ಹೀಗಾಗಿ, ಇಂತಹ ಅಕ್ರಮಗಳು ಮರುಕಳುಹಿಸುತ್ತಲೇ ಇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಅಕ್ರಮದ ತನಿಖೆ ಮಾಡಬೇಕಾಗಿರುವ ಪೊಲೀಸರೇ ಹಗರಣದಲ್ಲಿ ಷಾಮೀಲಾಗಿರುವುದು ದುರಂತ. ತನಿಖಾಧಿಕಾರಿಗಳು ಪ್ರಭಾವಿಗಳ ಒತ್ತಡಕ್ಕೆ ಮಣಿಯುವ ಸಾಧ್ಯತೆ ಹೆಚ್ಚಿರುತ್ತದೆ. ಪ್ರಕರಣದ ಗಂಭೀರತೆಯನ್ನು ಅರಿತು ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು. ಇಡೀ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು’ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಎಂ.ಶಂಕರಪ್ಪ ಮಾತನಾಡಿ, ‘ಮೊಳಕಾಲ್ಮುರು ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯ ಪುತ್ರಿಯೊಬ್ಬರು ಪಿಎಸ್‌ಐ ಆಗಿ ನೇಮಕಗೊಂಡಿದ್ದರು. ಅವರಿಗೆ ಲಂಚ ಕೊಡುವಷ್ಟು ಶಕ್ತಿ ಇಲ್ಲ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ನ್ಯಾಯಯುತವಾಗಿ ಹುದ್ದೆ ಪಡೆದಿದ್ದ ಅವರಿಗೆ ಅನ್ಯಾಯವಾಗಿದೆ’ ಎಂದು ಹೇಳಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸ್ತಿಹಳ್ಳಿ ಸುರೇಶಬಾಬು, ತಾಲ್ಲೂಕು ಘಟಕದ ಅಧ್ಯಕ್ಷ ಧನಂಜಯ್‌, ಮುಖಂಡರಾದ ರುದ್ರಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.