ADVERTISEMENT

ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಒತ್ತಾಯ: ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 15:33 IST
Last Updated 30 ಜೂನ್ 2025, 15:33 IST
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-150ರಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-150ರಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು   

ನಾಯಕನಹಟ್ಟಿ: ತಳಕು ಹೋಬಳಿಯ ಹಲವು ಸಮಸ್ಯೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ 150ನ್ನು ತಡೆದು ಪ್ರತಿಭಟನೆ ನಡೆಸಿದರು.

ರೈತಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ‘ತಳಕು ಹೋಬಳಿಯಲ್ಲಿರುವ ಎಲ್ಲ ಸರ್ಕಾರಿ ಕಚೇರಿಗಳ ಅಧಿಕಾರಿಗಳು ಸಾರ್ವಜನಿಕರಿಗೆ ಸಕಾಲದಲ್ಲಿ ಸಿಗುತ್ತಿಲ್ಲ. ಬಹುತೇಕ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಇರುತ್ತಿಲ್ಲ. ಈ ಸಂಬಂಧ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರೂ ಪರಿಸ್ಥಿತಿ ಬದಲಾಗಿಲ್ಲ’ ಎಂದು ದೂರಿದರು.

‘ಹೋಬಳಿಯ ಹಲವು ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ದುಃಸ್ಥಿತಿಗೆ ತಲುಪಿವೆ. ಇವುಗಳನ್ನು ದುರಸ್ತಿಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದಾಗಿದೆ. ಮಳೆಗಾಲ ಶುರುವಾಗಿದ್ದು, ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಬೇಡರೆಡ್ಡಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯರಿಲ್ಲದೆ ಬಿಕೋ ಎನ್ನುತ್ತಿದೆ. ಇದರಿಂದ ಸಾರ್ವಜನಿಕರು ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ದೂರದ ತಳಕು, ಚಳ್ಳಕೆರೆ, ಚಿತ್ರದುರ್ಗ ನಗರಕ್ಕೆ ಹೋಗಬೇಕಿದೆ. ಜಿಲ್ಲಾ ಆರೋಗ್ಯಾಧಿಕಾರಿಗಳ ಗಮನಕ್ಕೆ ತಂದರೂ ಇನ್ನೂ ಕ್ರಮವಹಿಸಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಜಿಲ್ಲೆಯ ಐತಿಹಾಸಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿರುವ ಗೌರಸಮುದ್ರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಹಲವು ರಸ್ತೆಗಳು ತಗ್ಗುಗುಂಡಿಗಳಿಂದ ಕೂಡಿದ್ದು, ಬಹುತೇಕ ರಸ್ತೆಗಳು ಹದಗೆಟ್ಟಿವೆ. ಹಿರೇಹಳ್ಳಿಯಿಂದ ಗೌರಸಮುದ್ರ ಗ್ರಾಮ, ಚಿಕ್ಕಹಳ್ಳಿಯಿಂದ ಬೇಡರೆಡ್ಡಿಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ. ಇವುಗಳ ದುರಸ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಹೋಬಳಿಯ ರೈತರಿಗೆ ಬೆಸ್ಕಾಂ ಉಪವಿಭಾಗೀಯ ಸರಬರಾಜು ಕೇಂದ್ರದಿಂದ ರೈತರ ಕೊಳವೆಬಾವಿಗಳಿಗೆ ಗುಣಮಟ್ಟದ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಗ್ರೌಂಡಿಂಗ್ ಸಮಸ್ಯೆಯಾಗಿ ವಿದ್ಯುತ್ ಪರಿವರ್ತಕಗಳು, ಕೊಳವೆಬಾವಿಗಳ ಮೋಟಾರ್‌ಗಳು ಸುಡುತ್ತಿವೆ. ಇದರ ಬಗ್ಗೆ ಅಧಿಕಾರಿಗಳು ಗಮನಹರಿಸುತ್ತಿಲ್ಲ’ ಎಂದು ಆರೋಪಿಸಿದರು.

ಚಳವಳಿ ಸ್ಥಳಕ್ಕೆ ಬಂದ ತಹಶೀಲ್ದಾರ್ ರೆಹಾನ್‌ ಪಾಷಾ, ‘ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ತಾವು ಆಗ್ರಹಿಸಿರುವ ಎಲ್ಲ ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಪರಿಹರಿಸಲಾಗುವುದು. ಹಾಗಾಗಿ ಪ್ರತಿಭಟನೆಯನ್ನು ಹಿಂಪಡೆಯಬೇಕು’ ಎಂದು ರೈತ ಮುಖಂಡರಲ್ಲಿ ಮನವಿ ಮಾಡಿಕೊಂಡರು.

ರೈತ ಮುಖಂಡರಾದ ರವಿಕುಮಾರ್, ಎಸ್.ಆರ್.ತಿಪ್ಪೇಸ್ವಾಮಿ, ನರಸಿಂಹರೆಡ್ಡಿ, ಅಶೋಕ್, ಸತೀಶ್, ಗಂಗಾಧರ್, ರಂಗಾರೆಡ್ಡಿ, ಹಿರೇಹಳ್ಳಿ ತಿಪ್ಪೇಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.