ADVERTISEMENT

ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ಕಿಡಿ

2ನೇ ದಿನವೂ ಮುಂದುವರಿದ ಶಾಸಕ ಟಿ.ರಘುಮೂರ್ತಿ ಧರಣಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 12:55 IST
Last Updated 7 ಆಗಸ್ಟ್ 2020, 12:55 IST
ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ಶುಕ್ರವಾರವೂ ಪ್ರತಿಭಟನೆ ನಡೆಯಿತು.
ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ಶುಕ್ರವಾರವೂ ಪ್ರತಿಭಟನೆ ನಡೆಯಿತು.   

ಚಿತ್ರದುರ್ಗ: ತಾಲ್ಲೂಕಿನ ತುರುವನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಗೆ ಸ್ಥಳಾಂತರ ಮಾಡಿರುವುದನ್ನು ವಿರೋಧಿಸಿ ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಎರಡನೇ ದಿನವೂ ಮುಂದುವರಿಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ.ಎಂ.ಲಿಂಗರಾಜು ಸೇರಿ ಹಲವು ಕಾಂಗ್ರೆಸ್‌ ಮುಖಂಡರು ಪ್ರತಿಭಟನಾಕಾರರಿಗೆ ಸಾಥ್‌ ನೀಡಿದ್ದರು. ಒನಕೆ ಓಬವ್ವ ವೃತ್ತದ ರಸ್ತೆಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಧರಣಿ ನಡೆಯಿತು.

ಬಿಜೆಪಿ ಸರ್ಕಾರ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್‌ ಹಾಗೂ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಶಾಸಕಿಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಘೋಷಣೆ ಕೂಗಿದರು. ಕಾಲೇಜು ಉಳಿಸಿಕೊಳ್ಳಲು ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಹಿಂಜರಿಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು, ‘ಕಾಲೇಜು ಸ್ಥಳಾಂತರ ಮಾಡುವುದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಕೋವಿಡ್‌ ಸಂದರ್ಭದಲ್ಲಿ ಸರ್ಕಾರ ರಾಜಕೀಯ ಪ್ರೇರಿತ ನಿರ್ಧಾರ ಕೈಗೊಂಡಿದ್ದು ಖಂಡನೀಯ. ಸರ್ಕಾರ ನಿರ್ಧಾರ ಬದಲಿಸದಿದ್ದರೆ ಬೆಂಗಳೂರಿಗೆ ಪಾದಯಾತ್ರೆ ನಡೆಸಲು ಸಿದ್ಧ’ ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್‌, ಜಿಲ್ಲಾ ಪಂಚಾಯಿತಿ ಸದಸ್ಯ ಪ್ರಕಾಶಮೂರ್ತಿ, ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷ ಸೋಮುಗುದ್ದು ರಂಗಸ್ವಾಮಿ, ಕಾಂಗ್ರೆಸ್‌ ಮುಖಂಡರಾದ ಬಿ.ಟಿ.ಜಗದೀಶ್‌, ಸಂಪತ್‌ಕುಮಾರ್‌, ಡಿ.ಎನ್‌.ಮೈಲಾರಪ್ಪ, ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ಶಿವಕುಮಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.