ADVERTISEMENT

ಚಿತ್ರದುರ್ಗ: ನೇರ ವೇತನ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 16:58 IST
Last Updated 29 ಸೆಪ್ಟೆಂಬರ್ 2020, 16:58 IST
ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಹೊಂದಿದ ಸಿಬ್ಬಂದಿ ಚಿತ್ರುದುರ್ಗದ ನಗರಸಭೆ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಹೊಂದಿದ ಸಿಬ್ಬಂದಿ ಚಿತ್ರುದುರ್ಗದ ನಗರಸಭೆ ಮುಂಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ನಗರ ಸ್ಥಳೀಯ ಸಂಸ್ಥೆಯ ಸಿಬ್ಬಂದಿ ನೇಮಕಾತಿಯಲ್ಲಿರುವ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ನೇರ ವೇತನ ಪಾವತಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ನಗರಸಭೆಯ ಹೊರಗುತ್ತಿಗೆ ಚಾಲಕರ ಸಂಘದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರಸಭೆ ಕಚೇರಿ ಎದುರು ಜಮಾಯಿಸಿದ ಚಾಲಕರು ಹೊರಗುತ್ತಿಗೆ ಪದ್ಧತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಲ ಕಾಲ ಧರಣಿ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದ ನಗರ ಸ್ಥಳೀಯ ಸಂಸ್ಥೆಯಲ್ಲಿ ವಾಹನ ಚಾಲಕರು, ನೀರಘಂಟಿಗಳು ಸೇರಿದಂತೆ ಹತ್ತು ಸಾವಿರಕ್ಕೂ ಅಧಿಕ ಸಿಬ್ಬಂದಿ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಹೊಂದಿದ್ದಾರೆ. ನೀರು ಪೂರೈಕೆ, ಸ್ವಚ್ಛತೆ ನಿರ್ವಹಣೆ ಹಾಗೂ ತ್ಯಾಜ್ಯ ಸಾಗಣೆಯ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಆದರೆ, ಉದ್ಯೋಗ ಹಾಗೂ ವೇತನಕ್ಕೆ ಕನಿಷ್ಠ ಭದ್ರತೆ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

ಹೊರಗುತ್ತಿಗೆ ಬದಲಿಗೆ ನೇರನೇಮಕಾತಿ ಮಾಡಿಕೊಂಡರೆ ಸರ್ಕಾರಕ್ಕೆ ಅನುಕೂಲವಾಗಲಿದೆ. ಪೌರಕಾರ್ಮಿಕರ ಮಾದರಿಯಲ್ಲಿ ನೇರವಾಗಿ ವೇತನ ಪಾವತಿ ಮಾಡುವ ವ್ಯವಸ್ಥೆ ರೂಪಿಸಬೇಕಿದೆ. ಇದರಿಂದ ಸರ್ಕಾರದ ಹಣ ಗುತ್ತಿಗೆದಾರರ ಪಾಲಾಗದಂತೆ ತಡೆಯಲು ಸಾಧ್ಯವಿದೆ. ಸೇವಾ ಶುಲ್ಕದ ಹೆಸರಿನಲ್ಲಿ ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ಪಾವತಿಸುವುದು ಉಳಿಯಲಿದೆ ಎಂದರು.

ನೇರ ವೇತನ ಪಾವತಿ ವ್ಯವಸ್ಥೆಯ ಬಗ್ಗೆ ಸರ್ಕಾರ ಕೂಡಲೇ ಗಮನ ಹರಿಸಬೇಕು. ಹೊರಗುತ್ತಿಗೆ ಪದ್ಧತಿಯಿಂದ ಆಗುತ್ತಿರುವ ಲೋಪಗಳನ್ನು ಸರಿಪಡಿಸಬೇಕು. ಸಿಬ್ಬಂದಿಯ ಮೇಲೆ ಆಗುತ್ತಿರುವ ಶೋಣೆಯನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ್, ಸದಸ್ಯರಾದ ದೊಡ್ಡಯ್ಯ, ನವೀನ್ ರೆಡ್ಡಿ, ಶಿವಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.