ADVERTISEMENT

ರೈತ, ಕಾರ್ಮಿಕ ಕಾಯ್ದೆಗಳಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 16:07 IST
Last Updated 26 ಮಾರ್ಚ್ 2021, 16:07 IST
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ಹಾಗೂ ಕಾರ್ಮಿಕ ವಿರೋಧಿ ಕರಾಳ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ಹಾಗೂ ಕಾರ್ಮಿಕ ವಿರೋಧಿ ಕರಾಳ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಚಿತ್ರದುರ್ಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ಹಾಗೂ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಆಂದೋಲನ ನಡೆಸುತ್ತಿರುವ ರೈತರು ಭಾರತ ಬಂದ್‌ಗೆ ಕರೆ ನೀಡಿರುವುದನ್ನು ಬೆಂಬಲಿಸಿ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತ ವಿರೋಧಿ ಕಾಯ್ದೆ ರೂಪಿಸುತ್ತಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಗೊಳಿಸಿ, ಕೃಷಿ ಕ್ಷೇತ್ರವನ್ನು ಬುಡಮೇಲು ಮಾಡಲು ಹೊರಟಿದೆ. ಇದು ರೈತರನ್ನು ಸಾವಿನ ದವಡೆಗೆ ನೂಕುವ ಕಾಯ್ದೆಯಾಗಿದೆ ಎಂದು ದೂರಿದರು.

ADVERTISEMENT

ಸರ್ಕಾರ ಕಾರ್ಮಿಕ ವಿರೋಧಿ ನೀತಿ ಜಾರಿಗೊಳಿಸಿದ್ದು, ಇದರಿಂದ ಕಾರ್ಮಿಕರು ನೆಮ್ಮದಿಯ ಜೀವನ ನಡೆಸದಂತೆ ತಡೆಹಿಡಿದಿದೆ. ಅಲ್ಲದೆ, ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಆರೋಪಿಸಿದರು.

ದೇಶದ ರೈತರು ಮತ್ತು ಕಾರ್ಮಿಕರಿಗೆ ಕರಾಳ ಶಾಸನವಾಗಿ ಜಾರಿಗೊಳಿಸಿರುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು. ರೈತರು, ಕಾರ್ಮಿಕರು, ಪ್ರಜೆಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಆಡಳಿತ ನಡೆಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಟಿ. ನೂಲೇನೂರು ಎಂ. ಶಂಕರಪ್ಪ, ಜಿ.ಸಿ. ಸುರೇಶ್ ಬಾಬು, ಉಮಾಪತಿ, ಗೌಸ್‌ಪೀರ್, ತ್ರಿವೇಣಿ, ಲಿಂಗರಾಜು, ಶಂಕರಪ್ಪ, ಮಲ್ಲಾಪುರ ತಿಪ್ಪೇಸ್ವಾಮಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಧನಂಜಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.