ADVERTISEMENT

ಜಮೀನು ಕಳೆದುಕೊಂಡವರಿಗೆ ಪರಿಹಾರ ನೀಡಿ

ರಾಜ್ಯ ರೈತ ಸಂಘದ ಪ್ರತಿಭಟನೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 4:06 IST
Last Updated 31 ಜನವರಿ 2023, 4:06 IST
ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.   

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಶಾಖಾ ಕಾಲುವೆ ನಿರ್ಮಾಣಕ್ಕೆ ಜಮೀನು ಕಳೆದುಕೊಂಡ ರೈತರಿಗೆ ತಕ್ಷಣ ಪರಿಹಾರ ನೀಡಲು ಅಗತ್ಯವಿರುವ ದೃಢೀಕರಣ ಕೊಡಬೇಕು ಎಂಬುದೂ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರವಾಸಿ ಮಂದಿರದ ಎದುರು ಜಮಾಯಿಸಿದ ರೈತರು ತಹಶೀಲ್ದಾರ್‌ ಕಚೇರಿ ಎದುರು ಧರಣಿ ನಡೆಸಿದರು. ಅಲ್ಲಿಂದ ಮೆರವಣಿಗೆ ಹೊರಟು ಒನಕೆ ಓಬವ್ವ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಮನವಿ ಸಲ್ಲಿಸಿದರು.

ಭೂಸ್ವಾಧೀನ ಪಡಿಸಿಕೊಂಡ ಜಮೀನಿನ ಮಾಲೀಕರಿಗೆ ಹಿಂಬರಹ, ಸ್ಪಷ್ಟೀಕರಣ ನೀಡಲಾಗಿದೆ. ಈ ಸ್ಪಷ್ಟೀಕರಣದ ಉದ್ದೇಶವನ್ನು ರೈತರಿಗೆ ತಿಳಿಸಿಲ್ಲ. ಸಾರ್ವಜನಿಕ ಉದ್ದೇಶಕ್ಕೆ ಭೂಮಿ ಪಡೆದರೂ ಒಡೆತನ ರೈತರದ್ದೇ ಆಗಿರಬೇಕು. ಭದ್ರಾ ಮೇಲ್ದಂಡೆ ಯೋಜನೆಯನ್ನು ಜಿಲ್ಲೆಯಲ್ಲಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಜಮೀನಿಗೆ ಭದ್ರಾ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

ಹದ್ದುಬಸ್ತು, ಪೋಡು ಸೇರಿ ಇತರ ಕಾರ್ಯಕ್ಕೆ ರೈತರಿಂದ ಶುಲ್ಕ ಪಡೆಯಲಾಗುತ್ತಿದೆ. ನಿಗದಿಪಡಿಸಿದ ಕೌಂಟರ್‌ನಲ್ಲಿ ₹ 50 ಸಾವಿರಕ್ಕಿಂತ ಹೆಚ್ಚಿನ ಮೊತ್ತವನ್ನು ಪಡೆಯುತ್ತಿಲ್ಲ. ಇದರಿಂದ ರೈತರಿಗೆ ಅನಾನುಕೂಲ ಆಗಿದೆ. ಪಹಣಿಗೆ ಸಾಂಕೇತಿಕವಾಗಿ ₹ 5 ನಿಗದಿ ಮಾಡಬೇಕು. ಪ್ರತಿ ವರ್ಷ ಒಂದು ಪಹಣಿಯನ್ನು ರೈತರಿಗೆ ಉಚಿತವಾಗಿ ತಲುಪಿಸಬೇಕು ಎಂದು ಆಗ್ರಹಿಸಿದರು.

ಮುಂಗಾರು ಮಳೆ ಹೆಚ್ಚಾಗಿ ಶೇ 80ರಷ್ಟು ಬೆಳೆ ನೀರುಪಾಲಾಗಿದೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬ್ಯಾಂಕ್‌ಗಳು ಸಾಲ ವಸೂಲಾತಿ ಪ್ರಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು. ಬೇಸಿಗೆ ಬೆಳೆ ಬೆಳೆಯಲು ರೈತರಿಗೆ 7 ಗಂಟೆ ಹಗಲು ಹೊತ್ತು ವಿದ್ಯುತ್‌ ನೀಡಬೇಕು. ಕಾಡುಪ್ರಾಣಿ ಹಾವಳಿ ಹೆಚ್ಚಾಗಿದ್ದು, ರಾತ್ರಿ ವಿದ್ಯುತ್‌ ನೀಡುವುದನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಡಿ.ಎಸ್‌.ಹಳ್ಳಿ ಮಲ್ಲಿಕಾರ್ಜುನ್‌, ಪ್ರಧಾನ ಕಾರ್ಯದರ್ಶಿ ರಾಮರೆಡ್ಡಿ, ಮುಖಂಡರಾದ ಎಂ.ಬಸವರಾಜಪ್ಪ, ಸತೀಶ್‌, ದಿವ್ಯಜ್ಯೋತಿ, ಸಾವಿತ್ರಮ್ಮ ಇದ್ದರು.***

ಪಿಂಚಣಿ ಸೌಲಭ್ಯಕ್ಕೆ ಒತ್ತಾಯ

ಅಂಗನವಾಡಿಯ ನಿವೃತ್ತ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮಾಸಿಕ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಎರಡು ದಶಕಗಳಿಗೂ ಹೆಚ್ಚು ಕಾಲ ದುಡಿದ ಅಂಗನವಾಡಿ ಕಾರ್ಯಕರ್ತೆಯರು ನಿವೃತ್ತರಾದ ಬಳಿಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ವೃದ್ಧಾಪ್ಯ ಜೀವನವನ್ನು ಕಡುಕಷ್ಟದಿಂದ ಸಾಗಿಸುತ್ತಿದ್ದಾರೆ. ಶಿಶು ಅಭಿವೃದ್ಧಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿದವರಿಗೆ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿದರು.

ಮಾಸಿಕ ಕನಿಷ್ಠ ₹ 5 ಸಾವಿರ ಪಿಂಚಣಿ ನಿಗದಿಪಡಿಸಿದರೆ ಅನುಕೂಲವಾಗುತ್ತದೆ. ವಯೋಸಹಜ ಕಾಯಿಲೆಯ ಚಿಕಿತ್ಸೆ, ಔಷಧಕ್ಕಾದರೂ ಪಿಂಚಣಿ ನೆರವಾಗುತ್ತದೆ. ಅಂಗನವಾಡಿ ಸಿಬ್ಬಂದಿಯ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿದ ಸೂಚನೆಗಳನ್ನು ಸರ್ಕಾರ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.

ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಜಿ.ಸಿ.ಸುರೇಶ್‌ಬಾಬು, ಫೆಡರೇಷನ್‌ ಅಧ್ಯಕ್ಷೆ ಎಸ್‌.ಭಾಗ್ಯಮ್ಮ, ಪ್ರಧಾನ ಕಾರ್ಯದರ್ಶಿ ಜಮುನಾ ಬಾಯಿ, ಮುಖಂಡರಾದ ಎಂ.ಸಾವಿತ್ರಮ್ಮ, ಎನ್‌.ರಾಧಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.