ADVERTISEMENT

ವಿದ್ಯಾರ್ಥಿ ವೇತನ ಬಿಡುಗಡೆಗೆ ಎಐಡಿಎಸ್‌ಒ ಕಾರ್ಯಕರ್ತರ ಆಗ್ರಹ

ರಾಜ್ಯ ಸರ್ಕಾರಕ್ಕೆ ಎಐಡಿಎಸ್‌ಒ ಕಾರ್ಯಕರ್ತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 12:20 IST
Last Updated 22 ಜನವರಿ 2021, 12:20 IST
ಶೈಕ್ಷಣಿಕ ಸಾಲಿನಲ್ಲಾದರೂ ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆ ಬಗೆಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಎಐಡಿಎಸ್‌ಒ ಸಂಘಟನೆ ಪದಾಧಿಕಾರಿಗಳು ಚಿತ್ರದುರ್ಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು
ಶೈಕ್ಷಣಿಕ ಸಾಲಿನಲ್ಲಾದರೂ ವಿದ್ಯಾರ್ಥಿಗಳ ಎಲ್ಲಾ ಸಮಸ್ಯೆ ಬಗೆಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಎಐಡಿಎಸ್‌ಒ ಸಂಘಟನೆ ಪದಾಧಿಕಾರಿಗಳು ಚಿತ್ರದುರ್ಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ಅರ್ಹರಿಗೆ ವಿದ್ಯಾರ್ಥಿವೇತನ ನೀಡಲು ರಾಜ್ಯ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್‌ ಆರ್ಗನೈಸೇಷನ್ (ಎಐಡಿಎಸ್‌ಒ) ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ ಅನೇಕ ಸಮಸ್ಯೆಗಳಿವೆ. ವಿದ್ಯಾರ್ಥಿಗಳ ಹಿತಕಾಯುವಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಾದರೂ ವಿದ್ಯಾರ್ಥಿಗಳ ಎಲ್ಲ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ರವಾನಿಸಿದರು.

ಕಾಲೇಜು ಆರಂಭವಾಗಿದ್ದರೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿಲ್ಲ. ಕೋವಿಡ್‌ ಕಾರಣಕ್ಕೆ ರಾಜ್ಯದ ಸಾವಿರಾರು ವಿದ್ಯಾರ್ಥಿಗಳಿಗೆ ಆರ್ಥಿಕ ತೊಂದರೆ ಉಂಟಾಗಿದೆ. ವಿದ್ಯಾರ್ಥಿ ವೇತನವಾದರೂ ಸಿಕ್ಕರೆ ಅನುಕೂಲವಾಗಲಿದೆ. ವಿದ್ಯಾರ್ಥಿವೇತನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ADVERTISEMENT

ಕೊರೊನಾ ಸೋಂಕಿನ ಆತಂಕದ ನಡುವೆಯೂ ಕಾಲೇಜು ಆರಂಭವಾದರೂ ಪಠ್ಯ ಬೋಧನೆ ಸಾಧ್ಯವಾಗುತ್ತಿಲ್ಲ. ಅತಿಥಿ ಉಪನ್ಯಾಸಕರ ಕೊರತೆಯಿಂದ ತರಗತಿಗಳಿಗೆ ಹಾಜರಾದರೂ ಪ್ರಯೋಜನವಾಗುತ್ತಿಲ್ಲ. ಸರ್ಕಾರ ಕೂಡಲೇ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಉಪನ್ಯಾಸಕರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ಕಾಲೇಜುಗಳತ್ತ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಆದರೆ, ಬೆರಳೆಣಿಕೆಯಷ್ಟು ಪ್ರಾಧ್ಯಾಪಕರಿದ್ದು, ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ.ಬಸ್‌ ಸೌಲಭ್ಯ ಇಲ್ಲದೆ ಕಾಲೇಜುಗಳಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಈ ಕುರಿತು ಗಮನಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಹೆಚ್ಚುವರಿ ಶುಲ್ಕ ಪಡೆಯುವುದನ್ನು ತಡೆಯಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಕಾಲೇಜುಗಳಲ್ಲಿ ಶೌಚಾಲಯ, ಸೂಕ್ತ ಆಸನ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಉಚಿತ ಬಸ್‌ಪಾಸ್ ನೀಡಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉಪನ್ಯಾಸಕರ ನೇಮಕಕ್ಕೆ ರಾಜ್ಯದ ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.