ADVERTISEMENT

ಕನ್ನಡ ರಾಜ್ಯೋತ್ಸವಕ್ಕೆ 200 ಜನರ ಮಿತಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 11:48 IST
Last Updated 21 ಅಕ್ಟೋಬರ್ 2020, 11:48 IST
ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ ಚಿತ್ರದುರ್ಗದಲ್ಲಿ ಬುಧವಾರ ನಡೆಯಿತು.
ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ ಚಿತ್ರದುರ್ಗದಲ್ಲಿ ಬುಧವಾರ ನಡೆಯಿತು.   

ಚಿತ್ರದುರ್ಗ: ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಿಸಲು ಮುಂದಾಗಿರುವ ಜಿಲ್ಲಾಡಳಿತ, 200 ಜನರ ಮಿತಿಯಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದೆ.

ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

‘ಜಿಲ್ಲಾ ಪೊಲೀಸ್ ಕವಾಯತು (ಡಿಎಆರ್) ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಧ್ವಜಾರೋಹಣಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕಿದೆ. ಸರ್ಕಾರದ ಮಾರ್ಗಸೂಚಿಯಂತೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಅಂತರ ಕಾಪಾಡಿಕೊಳ್ಳಬೇಕಿದೆ. ಹೆಚ್ಚು ಜನರು ಸೇರದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ’ ಎಂದು ಜಿಲ್ಲಾಧಿಕಾರಿ ಕವಿತಾ ತಿಳಿಸಿದರು.

ADVERTISEMENT

‘ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಆಹ್ವಾನಿಸುತ್ತಿಲ್ಲ. ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕೋವಿಡ್-19 ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಲಾಗುವುದು. ಸ್ತಬ್ಧ ಚಿತ್ರಗಳಲ್ಲಿಯೂ ಕೋವಿಡ್-19 ಜಾಗೃತಿ ಮೂಡಿಸಲು ಆದ್ಯತೆ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಪೊಲೀಸ್, ಗೃಹ ರಕ್ಷಕ ದಳ ಸೇರಿ 6 ರಿಂದ 8 ತಂಡಗಳು ಮಾತ್ರ ಪರೇಡ್ ನಡೆಸಬೇಕು. ಸುರಕ್ಷತೆ ಹಾಗೂ ಅಂತರ ಕಾಪಾಡುವ ನಿಟ್ಟಿನಲ್ಲಿ ಒತ್ತು ನೀಡಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.