ADVERTISEMENT

ಒಳಮೀಸಲಾತಿಗೆ ಅವಕಾಶವಿಲ್ಲ; ಅಜ್ಞಾನದ ಹೇಳಿಕೆ

ದೇವಮಿತ್ರ ವಿರುದ್ಧ ದೂರಿದ ಡಾ.ಎಚ್.ಪ್ರಕಾಶ್ ಬೀರಾವರ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 12:49 IST
Last Updated 5 ಸೆಪ್ಟೆಂಬರ್ 2020, 12:49 IST

ಚಿತ್ರದುರ್ಗ: ‘ಒಳಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದಾಗಿ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಸಂಸ್ಥಾಪಕ ದೇವಮಿತ್ರ ಅಜ್ಞಾನದ ಹೇಳಿಕೆ ನೀಡಿದ್ದಾರೆ’ ಎಂದು ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ರಾಜ್ಯ ಘಟಕದ ಅಧ್ಯಕ್ಷ ಡಾ.ಎಚ್.ಪ್ರಕಾಶ್ ಬೀರಾವರ ದೂರಿದ್ದಾರೆ.

‘ದೇವಮಿತ್ರ ಹೇಳಿಕೆ ಗಮನಿಸಿದರೆ ಅವರಿಗೆ ಕಾನೂನಿನ ಜ್ಞಾನ ಇಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. 25 ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಿರುವ ಹೋರಾಟಗಾರರಿಗೆ ಅವಮಾನಿಸಿದ್ದಾರೆ. ಬುದ್ಧಿಭ್ರಮಣೆ ಉಂಟಾಗಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ’ ಎಂದು ಶನಿವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಶೋಷಿತ ಸಮುದಾಯಗಳ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದರಾದ ರಮೇಶ ಜಿಗಜಿಣಗಿ, ಎ.ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಆಂಜನೇಯ, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಸಮುದಾಯದ ನಾಯಕರ ತೇಜೋವಧೆಗೆ ಮುಂದಾಗಿದ್ದಾರೆ. ಟೀಕೆಯೊಂದಿಗೆ ಸಮಾಜದಲ್ಲಿ ಒಡಕುಂಟು ಮಾಡಿ, ಬ್ಲಾಕ್‌ಮೇಲ್‌ಗೆ ಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ರಾಜ್ಯದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕಾಗಿ ಒಳಮೀಸಲಾತಿ ಜಾರಿಗೊಳಿಸಲು ಮುಖ್ಯಮಂತ್ರಿ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಇದು ನನ್ನ ಆಶಯ ಮಾತ್ರವಲ್ಲ. ಸಮುದಾಯದ ನಾಯಕರ ಒತ್ತಾಸೆಯಾಗಿದೆ’ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ದೇವಮಿತ್ರ, ಅವರ ಬೆಂಬಲಿಗರು ಒಳಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಸಿದರೆ, ರಾಜ್ಯದಾದ್ಯಂತ ಪ್ರತಿಭಟನೆಗೂ ಸಿದ್ಧ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.