ADVERTISEMENT

ರಸ್ತೆ ವಿಸ್ತರಣೆ ಕಾಮಗಾರಿ ವೇಗವಾಗಿ ಪೂರ್ಣಗೊಳಿಸಲು ಕವಿತಾ ಮನ್ನಿಕೇರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 2:22 IST
Last Updated 1 ಆಗಸ್ಟ್ 2021, 2:22 IST
ಚಿತ್ರದುರ್ಗದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಶನಿವಾರ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿರುವುದು.
ಚಿತ್ರದುರ್ಗದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಶನಿವಾರ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿರುವುದು.   

ಚಿತ್ರದುರ್ಗ: ನಗರ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಸಂಬಂಧ ನಡೆಯುತ್ತಿರುವ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆ ವಿಸ್ತರಣೆ ಸಂಬಂಧ ಅಡೆತಡೆ ಇರುವಂಥ ಸ್ಥಳಗಳಿಗೆ ಮೊದಲು ಭೇಟಿ ನೀಡಿದ ಅವರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ‘ಕಾಮಗಾರಿಗಳು ವಿಳಂಬ ಆದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಲಿದೆ. ಆದ್ದರಿಂದ ವೇಗವಾಗಿ ಕಾಮಗಾರಿ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಸೂಚನೆ ನೀಡಿದರು.

‘ಕಾಮಗಾರಿ ವೇಗ ಪಡೆಯಲು ಒತ್ತುವರಿ ಮಾಡಿಕೊಂಡಿರುವ ಕಟ್ಟಡ, ಮಳಿಗೆ ಇತರ ಜಾಗವನ್ನು ಮೊದಲು ತೆರವುಗೊಳಿಸಬೇಕು. ಈ ಸಂಬಂಧ ನಗರಸಭೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು. ಕಾಮಗಾರಿ ನಡೆಯುವ ಸ್ಥಳಗಳಲ್ಲಿ ರಸ್ತೆ ಸುರಕ್ಷತಾ ಕ್ರಮ ಕಡ್ಡಾಯವಾಗಿ ಪಾಲಿಸಬೇಕು. ಕಾಮಗಾರಿ ಕೈಗೊಂಡಿರುವ ಸ್ಥಳಗಳಲ್ಲಿ ನಾಮಫಲಕ ಅಳವಡಿಸಿದ ನಂತರವೇ ರಸ್ತೆ ಕಾಮಗಾರಿ ನಡೆಯಬೇಕು’ ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ADVERTISEMENT

ನಗರದ ಚಳ್ಳಕೆರೆ ಗೇಟ್, ಪಂಚಾಚಾರ್ಯ ಕಲ್ಯಾಣ ಮಂಟಪ ಮುಂಭಾಗ, ಸರ್ಕಾರಿ ವಿಜ್ಞಾನ ಕಾಲೇಜು ಮುಂಭಾಗ, ಮದಕರಿ ನಾಯಕ ವೃತ್ತ, ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ ವೃತ್ತ, ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದ ರಸ್ತೆ, ಅಂಚೆ ಕಚೇರಿ ರಸ್ತೆ, ನೀಲಕಂಠೇಶ್ವರ ದೇಗುಲ ಮುಂಭಾಗದ ರಸ್ತೆ, ಹೊಳಲ್ಕೆರೆ ರಸ್ತೆ, ಗೌರಸಂದ್ರ ಮಾರಮ್ಮ ದೇಗುಲ ಮುಂಭಾಗ ಹಾಗೂ ಕನಕ ವೃತ್ತ ಸೇರಿ ವಿವಿಧೆಡೆ ನಡೆಯುತ್ತಿರುವ ರಸ್ತೆ ವಿಸ್ತರಣೆ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸತೀಶ್‍ಬಾಬು, ಜಿ. ಕೃಷ್ಣಪ್ಪ, ಸಹಾಯಕ ಎಂಜಿನಿಯರ್ ಗೋಪಾಲ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ, ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಮ್ಮಣ್ಣ, ನಗರಸಭೆಯ ಎಂಜಿನಿಯರ್ ಮನೋಹರ್
ಇದ್ದರು.

ಬಿ.ಡಿ. ರಸ್ತೆ ತ್ವರಿತವಾಗಿ ಪೂರ್ಣಗೊಳಿಸಿ

ಸದಾ ಸಂಚಾರ ದಟ್ಟಣೆ, ಜನಜಂಗುಳಿಯಿಂದ ಕೂಡಿದ ನಗರದ ಎಸ್‍ಬಿಐ ವೃತ್ತದ ಮಾರ್ಗದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕೂಲಂಕಷವಾಗಿ ಪರಿಶೀಲನೆ ನಡೆಸಿದರು.

‘ಪ್ರವಾಸಿ ಮಂದಿರದಿಂದ ಗಾಂಧಿ ವೃತ್ತದವರೆಗಿನ ಮಾರ್ಗದಲ್ಲಿ ನಿತ್ಯ ನೂರಾರು ಸಾರ್ವಜನಿಕರು ವಹಿವಾಟು ನಡೆಸಲು ಬರುತ್ತಾರೆ. ಆದರಲ್ಲೂ ಹಿರಿಯ ನಾಗರಿಕರು, ಗರ್ಭಿಣಿಯರು ಬರುವುದರಿಂದ ರಸ್ತೆ ದಾಟಲು ಹರಸಾಹಸ ಪಡುತ್ತಾರೆ. ಹೀಗಾಗಿ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಅದಷ್ಟು ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.