
ಸಮಾಜವಾದಿ ಪಕ್ಷ
ಚಿತ್ರದುರ್ಗ: ‘ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ. ನಾವು ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎನ್. ಮಂಜಪ್ಪ ತಿಳಿಸಿದರು.
‘ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ದೇಶದಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಿದ್ದಾರೆ. ರಾಜ್ಯದಲ್ಲೂ ವಿವಿಧ ಕಾರ್ಯಕ್ರಮ ನಡೆಸಿ ಪಕ್ಷ ಮುನ್ನಡೆಸುತ್ತಿದ್ದಾರೆ. ಅದಕ್ಕೆ ನಾವೆಲ್ಲರೂ ಸಹಕಾರ ನೀಡುತ್ತಿದ್ದೇವೆ. ಮುಂದಿನ ಚುನಾವಣೆಗಳಿಗೆ ಸನ್ನದ್ಧರಾಗುವಂತೆ ಅವರು ಸೂಚನೆ ನೀಡಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಮುಂದಿನ ನಾಲ್ಕು ವಿಧಾನ ಪರಿಷತ್ ಸದಸ್ಯರ ಸ್ಥಾನಗಳ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧೆ ಮಾಡಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ’ ಎಂದರು.
ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಲಕ್ಷ್ಮಿಕಾಂತ್ ಮಾತನಾಡಿ, ‘ರಾಜ್ಯದ ಜನತೆ ಎಲ್ಲ ಪಕ್ಷಗಳ ಅಧಿಕಾರವನ್ನು ನೋಡಿದ್ದಾರೆ. ಅವರ ದುರಾಡಳಿತದಿಂದ ಬೇಸತ್ತಿದ್ದಾರೆ. ಪರ್ಯಾಯ ಶಕ್ತಿಗಾಗಿ ಹುಡುಕುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಮಾಜವಾದಿ ಪಕ್ಷ ಜನರ ಸಮಸ್ಯೆಗಳಿಗೆ ಧ್ವನಿಯಾಗಲಿದೆ’ ಎಂದರು.
ಮುಖಂಡರಾದ ಜಯ್ಯಣ್ಣ, ಬಾಲರಾಜ್, ನಾಗರಾಜ್, ಮಹಬೂಬ್ ಪಾಷ, ಮಧುಕುಮಾರ್, ಪ್ರದೀಪ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.