ADVERTISEMENT

ಚಿತ್ರದುರ್ಗ: ನಿಯಮ ಉಲ್ಲಂಘಿಸಿದರೆ ಅಧಿಕಾರಿಗಳೇ ಹೊಣೆ

ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ ಸಭೆಯಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 9:28 IST
Last Updated 7 ಮಾರ್ಚ್ 2023, 9:28 IST
ದಿವ್ಯಪ್ರಭು ಜಿ.ಆರ್‌.ಜೆ
ದಿವ್ಯಪ್ರಭು ಜಿ.ಆರ್‌.ಜೆ   

ಚಿತ್ರದುರ್ಗ: ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್‌ 9 ರಿಂದ 29ರವರೆಗೆ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 15,660 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ. ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆ ಹಾಗೂ 6ನೇ ತರಗತಿಯ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘‌ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ಯಾವುದೇ ಲೋಪದೋಷಗಳು ಸಂಭವಿಸದಂತೆ, ಕಟ್ಟುನಿಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪಿಸಿರುವ ಪರೀಕ್ಷಾ ಮಾರ್ಗದರ್ಶಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದರು.

ADVERTISEMENT

‘ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್‌ ಫೋನ್‌ ಬಳಸುವಂತಿಲ್ಲ. ಕೇಂದ್ರ ಮುಖ್ಯಸ್ಥರು ಮಾತ್ರ ಪರೀಕ್ಷಾ ಕಾರ್ಯಗಳಿಗೆ ಸಂಬಂಧಿಸಿ ಬಳಸಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ ಇರಬೇಕು’ ಎಂದರು.

‘ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಹಾಗೂ ಉತ್ತರ ಪತ್ರಿಕೆಗಳನ್ನು ತೆಗೆದುಕೊಂಡು ಹೋಗಲು ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಾಚಾರ್ಯರನ್ನು ಒಳಗೊಂಡ 7 ವಿಶೇಷ ಪ್ರಶ್ನೆ ಪತ್ರಿಕಾ ಪಾಲಕ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಪರೀಕ್ಷಾ ಕೇಂದ್ರ ಸಂಕೇತಗಳನ್ನು ಸರಿಯಾಗಿ ಪರಿಶೀಲಿಸಿ, ಜಿ.ಪಿ.ಎಸ್‌ ಅಳವಡಿಸಿದ ವಾಹನದಲ್ಲಿ ನಿಗದಿಪಡಿಸಿದ ಮಾರ್ಗ ಹಾಗೂ ಸಮಯಾನುಸಾರ ಪೊಲೀಸ್‌ ರಕ್ಷಣೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ತಲುಪಿಸಬೇಕು. ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ಪ್ರಶ್ನೆಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಪಡೆದು ಸರಿಯಾದ ಸಮಯಕ್ಕೆ ಪರೀಕ್ಷಾ ಮೇಲ್ವಿಚಾರಕರಿಗೆ ತಲುಪಿಸಬೇಕು’ ಎಂದು ತಿಳಿಸಿದರು.

‌‘ಈ ಬಾರಿ ಜಿಲ್ಲೆಯಲ್ಲಿ 15,660 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 4,807 ಕಲಾ, 4,722 ವಿಜ್ಞಾನ, 3,559 ವಾಣಿಜ್ಯ ವಿಭಾಗದ ಹೊಸ ವಿದ್ಯಾರ್ಥಿಗಳು ಸೇರಿದಂತೆ, 2,126 ಪುನರಾವರ್ತಿತ ಹಾಗೂ 446 ಖಾಸಗಿ ವಿದ್ಯಾರ್ಥಿಗಳು ಇದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 8, ಚಳ್ಳಕೆರೆ 3, ಹಿರಿಯೂರು 4, ಹೊಸದುರ್ಗ 4, ಮೊಳಕಾಲ್ಮುರು 2 ಹಾಗೂ ಹೊಳಲ್ಕೆರೆ 2 ಸೇರಿದಂತೆ ಒಟ್ಟು 23 ಪರೀಕ್ಷಾ ಕೇಂದ್ರಗಳಿವೆ. ಇವುಗಳಿಗೆ 128 ಪಿಯು ಕಾಲೇಜುಗಳು ಸಂಯೋಜಿತವಾಗಿವೆ. ಬೆಂಗಳೂರಿನ ಕೇಂದ್ರ ಕಚೇರಿಯಿಂದಲೇ ಸಿಟಿಂಗ್‌ ಸ್ಕ್ವಾಡ್‌ ಹಾಗೂ ಫ್ಲೈಯಿಂಗ್ ಸ್ಕ್ವಾಡ್‌ ನೇಮಿಸಲಾಗುವುದು’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜು ಸಭೆಗೆ ಮಾಹಿತಿ ನೀಡಿದರು.

12 ರಂದು 6ನೇ ತರಗತಿ ವಸತಿ ಶಾಲಾ ಪ್ರವೇಶ ಪರೀಕ್ಷೆ: ಮಾರ್ಚ್‌12 ರಂದು 6ನೇ ತರಗತಿ ವಸತಿ ಶಾಲಾ ಪ್ರವೇಶ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 7,705 ಮಕ್ಕಳು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪಿ.ಯು. ವಾರ್ಷಿಕ ಪರೀಕ್ಷೆಗಳು ಜರುಗುವ ಕೇಂದ್ರಗಳಲ್ಲಿ ವಸತಿ ಶಾಲಾ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್‌, ಡಿವೈಎಸ್‌ಪಿ ಅನಿಲ್‌ ಕುಮಾರ್‌, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಉಪನಿರ್ದೇಶಕ ರವಿಶಂಕರ್‌ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.