ADVERTISEMENT

ವಿಶೇಷ ಪ್ಯಾಕೇಜ್‌ಗೆ ಕೋರಿಕೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 14:20 IST
Last Updated 15 ಏಪ್ರಿಲ್ 2021, 14:20 IST
ಬಾಬು ಪತ್ತಾರ
ಬಾಬು ಪತ್ತಾರ   

ಚಿತ್ರದುರ್ಗ: ಕೊರೊನಾ ಸೋಂಕು ಕಾಣಿಸಿಕೊಂಡು ಸಂಕಷ್ಟಕ್ಕೆ ಸಿಲುಕಿರುವ ವಿಶ್ವಕರ್ಮ ಸಮುದಾಯಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಕೋರಲಾಗಿದೆ ಎಂದು ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡಗಿ, ಕಮ್ಮಾರ, ಅಕ್ಕಸಾಲಿಗರು, ಲೋಹದ ಕೆಲಸ, ಶಿಲ್ಪಕಲೆ ಕೆತ್ತನೆ ಮಾಡುವವರು ಕೋವಿಡ್‌ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲಸ ಇಲ್ಲದೇ ಜೀವನ ನಿರ್ವಹಣೆಗೆ ಕಷ್ಟಪಡುತ್ತಿದ್ದಾರೆ. ತುಂಬಾ ಸಂಕಷ್ಟದಲ್ಲಿರುವ ಸಮುದಾಯಕ್ಕೆ ಸರ್ಕಾರ ನೆರವಾಗುವ ವಿಶ್ವಾಸವಿದೆ’ ಎಂದು ಅಭಿಪ್ರಾಯಪಟ್ಟರು.

‘ನಿಗಮದ ಚಟುವಟಿಕೆಗಳಿಗೆ ₹ 100 ಕೋಟಿ ನೀಡುವಂತೆ ಬಜೆಟ್‌ ಪೂರ್ವದಲ್ಲಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ಕೋವಿಡ್‍ನಿಂದಾಗಿ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ನಿಗಮಕ್ಕೆ ₹ 10 ಕೋಟಿ ಮಾತ್ರ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಹೆಚ್ಚುವರಿಯಾಗಿ ₹ 1,000 ಕೋಟಿ ಅನುದಾನ ನೀಡಲಾಗಿದೆ. ಇದರಲ್ಲಿ ನಿಗಮಕ್ಕೆ ₹ 20 ಕೋಟಿ ಸಿಗುವ ಸಾಧ್ಯತೆ ಇದೆ’ ಎಂದು ಹೇಳಿದರು.

ADVERTISEMENT

‘ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಶಿವಾರ ಪಟ್ಟಣದಲ್ಲಿ ₹ 10ಕೋಟಿ ವೆಚ್ಚದಲ್ಲಿ ಶಿಲ್ಪಕಲಾ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಅನುದಾನ ನಿಗಮಕ್ಕೆ ಬಿಡುಗಡೆ ಮಾಡಿದ್ದು, ಕ್ರಿಯಾಯೋಜನೆಯು ಸಿದ್ಧವಾಗಿದೆ. ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಶಿಲ್ಪಕಲಾ ಭವನ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದರು.

ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಾಚಾರಿ, ನಗರಸಭೆ ನಾಮನಿರ್ದೇಶನ ಸದಸ್ಯ ರಮೇಶಾಚಾರಿ, ನಿಗಮದ ಜಿಲ್ಲಾ ವ್ಯವಸ್ಥಾಪಕ ಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.