ADVERTISEMENT

ಮೂರು ಕ್ಷೇತ್ರಗಳಲ್ಲೂ ಗೆಲ್ತೀವಿ: ಸಿ.ಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 15:42 IST
Last Updated 21 ಅಕ್ಟೋಬರ್ 2024, 15:42 IST

ಚಳ್ಳಕೆರೆ (ಚಿತ್ರದುರ್ಗ ಜಿಲ್ಲೆ): ‘ಸೋಮವಾರ ರಾತ್ರಿ ಅಥವಾ ಮಂಗಳವಾರ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದೆ. ನಾವು ಎಲ್ಲ ಮೂರು ಕ್ಷೇತ್ರಗಳಲ್ಲೂ ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಟಿ.ರಘುಮೂರ್ತಿ ಪುತ್ರಿಯ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಸೋಮವಾ ಭೇಟಿ ನೀಡಿದ್ದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಚನ್ನಪಟ್ಟಣ ಕ್ಷೇತ್ರದಲ್ಲಿ ಯೋಗೇಶ್ವರ್‌ ಕಾಂಗ್ರೆಸ್‌ ಸಂಪರ್ಕದಲ್ಲಿ ಇಲ್ಲ. ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದರು.

ADVERTISEMENT

ಕಾಂಗ್ರೆಸ್‌ ಅಹಿಂದ ಹಣವನ್ನು ಲೂಟಿ ಹೊಡೆದಿದೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಸರ್ಕಾರ ಕೆಡವಲು ಅವರ ಪಕ್ಷದ ಮುಖಂಡರೇ ₹ 1,000 ಕೋಟಿ ಸಿದ್ಧಪಡಿಸಿರುವುದಾಗಿ ಯತ್ನಾಳ್‌ ಅವರೇ ಆರೋಪಿಸಿದ್ದಾರೆ. ನಮ್ಮ ಸರ್ಕಾರ ಕೆಡವಲು ಯತ್ನಾಳ್‌ ಎಲ್ಲಿಂದ ಹಣ ತರುತ್ತಾರೆ’? ಎಂದು ಪ್ರಶ್ನಿಸಿದರು.

ಇದೇ ವೇಳೆ ಪ್ರತ್ಯೇಕವಾಗಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ‘ಸಿ.ಪಿ.ಯೋಗೇಶ್ವರ್‌ ನಮ್ಮ ಸಂಪರ್ಕದಲ್ಲಿ ಇಲ್ಲ. ಎಚ್‌.ಡಿ. ಕುಮಾರಸ್ವಾಮಿ ಏನೇನೋ ಮಾತನಾಡುತ್ತಾ ಇರುತ್ತಾರೆ. ಕುಮಾರಸ್ವಾಮಿ ಅವರೇ ಬೇರೆಯವರೊಂದಿಗೆ ಸಂಪರ್ಕದಲ್ಲಿ ಇರಬಹುದು’ ಎಂದರು

ಕಪ್ಪು ವಸ್ತ್ರ ಪ್ರದರ್ಶನ: ವಿವಾಹ ಸಮಾರಂಭದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಮಾದಿಗ ಮಹಾಸಭಾ ಸದಸ್ಯರು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕಪ್ಪು ವಸ್ತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. 

ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ‘ಒಳ ಮೀಸಲಾತಿ ಜಾರಿ ಮಾಡುತ್ತೇವೆ’ ಎಂದು ಭರವಸೆ ನೀಡಿ ಮುಂದೆ ಸಾಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.