ADVERTISEMENT

ಹಾಸ್ಟೆಲ್‌ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ನುಗ್ಗಲು ವಿದ್ಯಾರ್ಥಿಗಳ ಪ್ರಯತ್ನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2019, 11:53 IST
Last Updated 21 ಆಗಸ್ಟ್ 2019, 11:53 IST
ಚಿತ್ರದುರ್ಗದಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಕ್ಕೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ನಡೆಸಿದರು
ಚಿತ್ರದುರ್ಗದಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಕ್ಕೆ ಒತ್ತಾಯಿಸಿ ಬುಧವಾರ ಪ್ರತಿಭಟನೆ ನಡೆಸಿದರು   

ಚಿತ್ರದುರ್ಗ: ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಗೊಲ್ಲರ ಸಂಘದ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು.

‘ಊಟ–ವಸತಿಗೆ ಹೋರಾಟ’, ‘ಹಾಸ್ಟೆಲ್‌ ಸೌಲಭ್ಯ ಕಲ್ಪಿಸಿ’ ಎಂಬ ಪ್ಲೆಕಾರ್ಡ್‌ ಹಿಡಿದು ಬೀದಿಗೆ ಇಳಿದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೇಡಿಕೆಗೆ ಸ್ಪಂದಿಸದೇ ಇದ್ದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಗೊಲ್ಲರ ಹಾಸ್ಟೆಲ್‌ನಿಂದ ಮೆರವಣಿಗೆ ಹೊರಟ ವಿದ್ಯಾರ್ಥಿಗಳು ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಇದರಿಂದ ಕೆಲ ಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ವಿದ್ಯಾರ್ಥಿಗಳು ಕಚೇರಿಗೆ ನುಗ್ಗಲು ಪ್ರಯತ್ನಿಸಿದರು. ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಪ್ರತಿಭಟನಾಕಾರರ ಅಹವಾಲು ಆಲಿಸಿ ಸರ್ಕಾರಕ್ಕೆ ರವಾನೆ ಮಾಡುವುದಾಗಿ ಆಶ್ವಾಸನೆ ನೀಡಿದರು.

ADVERTISEMENT

ಗೊಲ್ಲರು, ಜೋಗಿ, ಉಪ್ಪಾರ, ದಾಸ ಸೇರಿದಂತೆ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿದೆ. ಸುಮಾರು ಮೂರು ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಜಿಲ್ಲೆಯಲ್ಲಿ ಸೌಲಭ್ಯಗಳು ಮರೀಚಿಕೆಯಾಗಿವೆ. ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಆತಂಕ ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗಗಳ ಪಟ್ಟಿಯಲ್ಲಿ 49 ಜಾತಿಗಳಿವೆ. 1991ಕ್ಕೂ ಮೊದಲು ಪರಿಶಿಷ್ಟ ಪಂಗಡಕ್ಕೆ ಸಿಗುವ ಎಲ್ಲ ಸೌಲಭ್ಯ ಈ ಸಮುದಾಯಕ್ಕೂ ಸಿಗುತ್ತಿತ್ತು. ಆದರೆ, ಬದಲಾದ ನೀತಿಯಿಂದಾಗಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಆದರೆ, ಮೀಸಲಾತಿ ಹಂಚಿಕೆ ಪ್ರಮಾಣ ಅವೈಜ್ಞಾನಿಕವಾಗಿ ನಿಗದಿ ಮಾಡಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ಅಲವತ್ತುಕೊಂಡರು.

ಬಿಸಿಎಂ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್‌ಗಳಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಮಕ್ಕಳಿಗೆ ಶೇ 10ರಷ್ಟು ಸೀಟುಗಳು ಮಾತ್ರ ಮೀಸಲಾಗಿವೆ. ಜನಸಂಖ್ಯೆ ಹೆಚ್ಚಾಗಿರುವುದರಿಂದ ಅರ್ಜಿ ಸಲ್ಲಿಸಿದ ಎಲ್ಲರಿಗೂ ಪ್ರವೇಶಾತಿ ದೊರಕುತ್ತಿಲ್ಲ. ಇದರಿಂದ ಅನೇಕರು ಶಿಕ್ಷಣವನ್ನು ಮೊಟಕುಗೊಳಿಸುತ್ತಿದ್ದಾರೆ. ಈ ಬಗ್ಗೆ 1988ರಿಂದ ಸರ್ಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಹಾಸ್ಟೆಲ್‌ ಪ್ರವೇಶಾತಿ ನೀಡುವಂತೆ ರಾಜ್ಯ ಸರ್ಕಾರ 2015ರಲ್ಲಿ ಆದೇಶ ಹೊರಡಿಸಿತ್ತು. ಆದರೆ, ಈವರೆಗೆ ಯಾವುದೇ ವಿದ್ಯಾರ್ಥಿನಿಲಯದಲ್ಲಿ ಎಲ್ಲರಿಗೂ ಪ್ರವೇಶಾತಿ ದೊರಕುತ್ತಿಲ್ಲ. ಬಜೆಟ್‌ನಲ್ಲಿ ಮೀಸಲಿಡುವ ₹ 100 ಕೋಟಿ ಅನುದಾವನ್ನು ಶಿಕ್ಷಣಕ್ಕೆ ವಿನಿಯೋಗ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಸಿ.ಮಹಾಲಿಂಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದೇಶ್‌ ಯಾದವ, ವೆಂಕಟೇಶ್ ಯಾದವ, ಉಪಾಧ್ಯಕ್ಷ ಕೃಷ್ಣಪ್ಪ, ವೀರಭದ್ರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.