ADVERTISEMENT

ಡಿಎಂಎಫ್‌ ಅನುದಾನ ದುರ್ಬಳಕೆ; ಕ್ರಿಮಿನಲ್‌ ಪ್ರಕರಣ ದಾಖಲು

ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ವಜಾ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 14:35 IST
Last Updated 23 ಜೂನ್ 2023, 14:35 IST
ಸತೀಶ್‌ ಕಲ್ಲಟ್ಟಿ, ಕೆ.ಜಿ.ಮೂಡಲಗಿರಿಯಪ್ಪ
ಸತೀಶ್‌ ಕಲ್ಲಟ್ಟಿ, ಕೆ.ಜಿ.ಮೂಡಲಗಿರಿಯಪ್ಪ   

ಚಿತ್ರದುರ್ಗ: ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿ (ಡಿಎಂಎಫ್‌) ದುರುಪಯೋಗ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಕೆ.ಜಿ.ಮೂಡಲಗಿರಿಯಪ್ಪ ಹಾಗೂ ಎಂಜಿನಿಯರ್‌ ಸತೀಶ್‌ ಕಲ್ಲಟ್ಟಿ ಎಂಬುವರನ್ನು ಸೇವೆಯಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಅನುದಾನ ನೀಡಲಾಗಿತ್ತು. ಕಾಮಗಾರಿ ಪೂರ್ಣಗೊಳಿಸದೇ ₹ 1.01 ಕೋಟಿಯನ್ನು ದುರುಪಯೋಗ ಮಾಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದಿತ್ತು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದ ಸಮಿತಿ ಸ್ಥಳ ಪರಿಶೀಲನೆ ಮಾಡಿದಾಗ ಹಣ ದುರುಪಯೋಗ ಆಗಿರುವುದು ಖಚಿತವಾಗಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ.

ಮೊಳಕಾಲ್ಮುರು ಪಟ್ಟಣದಲ್ಲಿ 9, ನಾಯಕನಹಟ್ಟಿಯಲ್ಲಿ 6 ಹಾಗೂ ಉಚ್ಚಂಗಿದುರ್ಗದಲ್ಲಿ 1 ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣದಲ್ಲಿ ಅವ್ಯವಹಾರ ಆಗಿರುವುದು ಪರಿಶೀಲನೆಯ ಸಂದರ್ಭದಲ್ಲಿ ಗೊತ್ತಾಗಿದೆ. ಕಾಮಗಾರಿ ನಡೆಸದೇ ಇರುವ ಗುತ್ತಿಗೆದಾರನಿಗೆ ಹಣ ಸಂದಾಯ ಮಾಡಲಾಗಿದೆ. ದ್ವಿಚಕ್ರ ವಾಹನ ಸಂಚರಿಸದಿರುವ ಸ್ಥಳದಲ್ಲಿ ಕೂಡ ಘಟಕಗಳನ್ನು ನಿರ್ಮಿಸಲಾಗಿದೆ. ಈ ಸಂಬಂಧ ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ವ್ಯವಸ್ಥಾಪಕ ಎಂ.ಜೆ.ಮಲ್ಲಿಕಾರ್ಜುನ ಎಂಬುವರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ದೂರು ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.