ಹಿರಿಯೂರು: ‘ಯಾವುದೇ ಹಂತದ ಶಿಕ್ಷಕರಿರಲಿ, ತಮ್ಮ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಂಡರೆ ಮಾತ್ರ ವೃತ್ತಿಯಲ್ಲಿ ಯಶಸ್ಸು ಪಡೆಯಲು ಸಾಧ್ಯ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ತಿಪ್ಪೇಸ್ವಾಮಿ ಹೇಳಿದರು.
ನಗರದ ಹುಳಿಯಾರು ರಸ್ತೆಯಲ್ಲಿರುವ ತಾಲ್ಲೂಕು ಕ್ರೀಡಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಭಾನುವಾರ ಶಿಕ್ಷಕರಿಗೆ ಏರ್ಪಡಿಸಿದ್ದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
‘ಈಚೆಗೆ ಹೃದಯಾಘಾತಕ್ಕೆ ಒಳಗಾಗುವವರಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚಿದೆ ಎಂಬ ಮಾತು ಕೇಳಿ ಬರುತ್ತಿದೆ. ವಯಸ್ಸಿನ ಪರಿಗಣನೆ ಮಾಡದೆ ವರ್ಷದಲ್ಲಿ ಕನಿಷ್ಠ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಜೊತೆಗೆ ತರಗತಿಯಲ್ಲಿ ಬೋಧನೆ ಮಾಡುವಾಗ ವಿದ್ಯಾರ್ಥಿಗಳ ದೈಹಿಕ ಚಟುವಟಿಕೆಗಳ ಗಮನ ಇಟ್ಟಿರಬೇಕು. ಶಿಕ್ಷಕರ ದಿನಾಚರಣೆ ಎಂದು ಕ್ರೀಡೆಯಲ್ಲಿ ಪಾಲ್ಗೊಳ್ಳದೆ ನಿತ್ಯ ಯೋಗ, ಧ್ಯಾನ, ವ್ಯಾಯಾಮಕ್ಕೆ ಒಂದಿಷ್ಟು ಸಮಯ ಮೀಸಲಿಡಬೇಕು’ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ತಾಲ್ಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಹೇಶ್ವರ ರೆಡ್ಡಿ, ಶಿಕ್ಷಣಾಧಿಕಾರಿ ರವೀಂದ್ರನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾದ ಲೋಕಮ್ಮ, ಪ್ರಧಾನ ಕಾರ್ಯದರ್ಶಿ ಮಹಾಸ್ವಾಮಿ, ಸಹಕಾರ್ಯದರ್ಶಿ ಮಧುಸೂದನ್, ಜಿಲ್ಲಾ ಉಪಾಧ್ಯಕ್ಷ ರಮೇಶ್ ನಾಯ್ಕ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹನುಮಂತರೆಡ್ಡಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.