ADVERTISEMENT

ಶಿಕ್ಷಕರ ನೇಮಕಾತಿ ಪರೀಕ್ಷೆ ಕಟ್ಟುನಿಟ್ಟು

ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಮೇ 2022, 2:41 IST
Last Updated 13 ಮೇ 2022, 2:41 IST
ಕವಿತಾ ಎಸ್‌. ಮನ್ನಿಕೇರಿ
ಕವಿತಾ ಎಸ್‌. ಮನ್ನಿಕೇರಿ   

ಚಿತ್ರದುರ್ಗ: ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳು ಬೆಳಕಿಗೆ ಬರುತ್ತಿರುವುದರಿಂದ ಪದವೀಧರ ಪ್ರಾಥಮಿಕ ಶಿಕ್ಷಕರ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮೇ 21, 22ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಪರೀಕ್ಷಾ ಕೇಂದ್ರ ಹಾಗೂ ಕೊಠಡಿಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅವಳಡಿಸಬೇಕು. ಪರೀಕ್ಷಾ ಕೇಂದ್ರದ ಉಸ್ತುವಾರಿ ಅಧಿಕಾರಿ, ಕೊಠಡಿ ಮೇಲ್ವಿಚಾರಕರು ಹಾಗೂ ಅಭ್ಯರ್ಥಿಗಳು ಮೊಬೈಲ್, ವಾಚ್ ಸೇರಿ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ಬಳಸುವಂತಿಲ್ಲ’ ಎಂದು ತಾಕೀತು ಮಾಡಿದರು.

ADVERTISEMENT

‘ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗುತ್ತದೆ. ಕೇಂದ್ರದ ಸುತ್ತಲಿನ 200 ಮೀಟರ್‌ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ನಿಷೇಧಾಜ್ಞೆ ಹೇರಲಾಗುತ್ತದೆ. ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆ
ಸುಗಮವಾಗಿ ನಡೆಸುವ ಜವಾಬ್ದಾರಿ ಪ್ರತಿಯೊಬ್ಬ ಸಿಬ್ಬಂದಿಯ ಮೇಲಿದೆ’ ಎಂದರು.

ಡಿಡಿಪಿಐ ಕೆ. ರವಿಶಂಕರ್ ರೆಡ್ಡಿ ಮಾತನಾಡಿ, ‘ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಮಹಾರಾಣಿ ಸಂಯುಕ್ತ ಪಿಯು ಕಾಲೇಜು, ಎಂ.ಕೆ. ಹಟ್ಟಿ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾವಿಕಾಸ ಪ್ರೌಢಶಾಲೆ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ, ವಾಸವಿ ಪ್ರೌಢಶಾಲೆ, ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆ ಸೇರಿ ಎಂಟು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಜಿಲ್ಲೆಯಲ್ಲಿ 1,982 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ’ ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಸಹಾಯವಾಣಿತೆರೆಯಲಾಗಿದೆ. ಸಹಾಯವಾಣಿ 9448694592ಗೆ ಸಂಪರ್ಕಿಸಬಹುದು. ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ, ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್. ರಂಗನಾಥ್, ಡಯಟ್ ಪ್ರಾಂಶುಪಾಲ ಎಸ್‍ಕೆಬಿ ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.