ADVERTISEMENT

ಶಿಕ್ಷಕರ ನೇಮಕಾತಿ ಪರೀಕ್ಷೆ ಸುಗಮ

ಸಾಮಾನ್ಯ ಪತ್ರಿಕೆಗೆ 602 ಅಭ್ಯರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 22 ಮೇ 2022, 2:34 IST
Last Updated 22 ಮೇ 2022, 2:34 IST
ಚಿತ್ರದುರ್ಗ ನಗರದ ವಾಸವಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿದ ಪೊಲೀಸ್‌ ಸಿಬ್ಬಂದಿ.
ಚಿತ್ರದುರ್ಗ ನಗರದ ವಾಸವಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿದ ಪೊಲೀಸ್‌ ಸಿಬ್ಬಂದಿ.   

ಚಿತ್ರದುರ್ಗ: ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಶನಿವಾರ ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು.

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಸಾಕಷ್ಟು ಅಕ್ರಮಗಳು ಕಂಡುಬಂದ ಕಾರಣ ಈ ಪರೀಕ್ಷೆಗೆ ಹೆಚ್ಚಿನ ಮುಂಜಾಗ್ರತೆ ವಹಿಸಲಾಗಿತ್ತು. ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ಸಂಯುಕ್ತ ಪಿಯು ಕಾಲೇಜು, ಎಂ.ಕೆ. ಹಟ್ಟಿ ಎಸ್‌ಜೆಎಂ ಆಂಗ್ಲ ಮಾಧ್ಯಮ ಶಾಲೆ, ವಿದ್ಯಾವಿಕಾಸ ಪ್ರೌಢಶಾಲೆ, ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ, ವಾಸವಿ ಪ್ರೌಢಶಾಲೆ ಹಾಗೂ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದವು.

ಬೆಳಿಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ಪತ್ರಿಕೆ-1 ಸಾಮಾನ್ಯ ಪತ್ರಿಕೆಗೆ ನೋಂದಣಿಯಾಗಿದ್ದ 1,982 ಅಭ್ಯರ್ಥಿಗಳಲ್ಲಿ 602 ಜನ ಗೈರಾಗಿದ್ದರು. ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ ಮಧ್ಯಾಹ್ನ 2.30ರಿಂದ 5.30ರವರೆಗಿನ ನಡೆದ ಆಂಗ್ಲ ಭಾಷೆ ವಿಷಯದ ಪರೀಕ್ಷೆಗೆ ನೋಂದಣಿಯಾಗಿದ್ದ 501 ಪರೀಕ್ಷಾರ್ಥಿಗಳಲ್ಲಿ 368 ಹಾಜರಾಗಿದ್ದರು.

ADVERTISEMENT

ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿತ್ತು. ಸೂಚನೆಯಂತೆ ಪರೀಕ್ಷಾ ಕೇಂದ್ರಕ್ಕೆ ಒಂದು ಗಂಟೆ ಮುಂಚಿತವಾಗಿ ಬಂದ ಅಭ್ಯರ್ಥಿಗಳಿಗೆ ಕೊರೊನಾ ನಿಯಾಮಾನುಸಾರ ಥರ್ಮಲ್‌ ಸ್ಕ್ಯಾನಿಂಗ್‌ ಮಾಡಲಾಯಿತು. ಬಳಿಕ ಪೊಲೀಸ್‌ ಸಿಬ್ಬಂದಿ ಎಲ್ಲ ಎಲೆಕ್ಟ್ರಾನಿಕ್ ಉಪಕರಣಗಳ ತಪಾಸಣೆ ನಡೆಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದರು.

‘ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವ ಜತೆಗೆ ಪರೀಕ್ಷಾ ಚಟುವಟಿಕೆಯ ಚಿತ್ರೀಕರಣ ನಡೆಸಿದ್ದು, ಪರೀಕ್ಷೆ ಪೂರ್ಣಗೊಳ್ಳುವವರೆಗೂ ಪೊಲೀಸ್‌ ಸಿಬ್ಬಂದಿ ಭದ್ರತೆ ಕಲ್ಪಿಸಿದ್ದರು. ಚಿಕ್ಕ ಲೋಪವೂ ಆಗದಂತೆ ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿದೆ’
ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.