
ಚಿತ್ರದುರ್ಗ: ‘ನಗರದ 35 ಕೇಂದ್ರಗಳಲ್ಲಿ ಡಿ.7 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಯಲಿದೆ. ಪರೀಕ್ಷಾ ಕಾರ್ಯಕ್ಕೆ ಗೈರಾಗುವ ಸಿಬ್ಬಂದಿ ಮೇಲೆ ಕಠಿಣ ಕ್ರಮ ಜರುಗಿಸಲಾಗುತ್ತದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಚ್ಚರಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
‘ಪರೀಕ್ಷಾ ಕೊಠಡಿ ಮೇಲ್ವಿಚಾರಕರನ್ನಾಗಿ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ಮಾತ್ರ ನೇಮಿಸುವಂತೆ ಪರೀಕ್ಷಾ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಕೇಂದ್ರಗಳ ಮುಖ್ಯಸ್ಥರು ಇದನ್ನು ಗಮನದಲ್ಲಿ ಇರಿಸಿಕೊಳ್ಳಬೇಕು’ ಎಂದರು.
‘ಕೆಲ ಖಾಸಗಿ ಶಾಲಾ ಕಾಲೇಜುಗಳಲ್ಲಿ ಅನುದಾನಿತ ಶಿಕ್ಷಕರು ಲಭ್ಯವಿಲ್ಲದಿದ್ದರೆ, ಸ್ಥಳೀಯ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ನೇಮಿಸಬೇಕು. ಶಿಕ್ಷಕರು ಅಥವಾ ಉಪನ್ಯಾಸಕರು ಗೈರಾದರೆ ಅಂತವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಪರೀಕ್ಷಾ ಅಕ್ರಮಗಳಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಪ್ರತ್ಯೇಕ ಕಾಯ್ದೆ ರೂಪಿಸಿದೆ. ಸಿಬ್ಬಂದಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.
‘ಪತ್ರಿಕೆ-1ರ ಪರೀಕ್ಷೆ ನಗರದ 8 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 2,623 ಅಭ್ಯರ್ಥಿಗಳು, ಪತ್ರಿಕೆ-2 ಪರೀಕ್ಷೆ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 10,190 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಇಬ್ಬರಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಡಿ. 8 ರಂದು ಉತ್ತರ ಪತ್ರಿಕೆಗಳನ್ನು ಬೆಂಗಳೂರಿನ ಕೇಂದ್ರಿಕೃತ ದಾಖಲಾತಿ ಘಟಕಕ್ಕೆ ನೋಡಲ್ ಅಧಿಕಾರಿಗಳು ಕೊಂಡೊಯ್ಯುವರು. ಈ ಸಮಯದಲ್ಲಿಯೂ ಸಹ ಪೊಲೀಸ್ ಬೆಂಗಾವಲು ಪಡೆಯನ್ನು ನಿಯೋಜಿಸಬೇಕು’ ಎಂದು ನಿರ್ದೇಶನ ನೀಡಿದರು.
ಡಯಟ್ ಉಪನಿರ್ದೇಶಕ ಎಂ.ನಾಸಿರುದ್ದೀನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿಯ ನೋಡಲ್ ಅಧಿಕಾರಿ ಮಹಮದ್ ಇನಾಯತ್ ಉಲ್ಲಾ, ಜಿಲ್ಲಾ ಖಜಾನಾಧಿಕಾರಿ ಎಚ್.ಟಿ.ಅಶೋಕ್ ಇದ್ದರು.
ಟಿಇಟಿ ಪರೀಕ್ಷೆಗೆ 12813 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಮುಖ್ಯ ಅಧೀಕ್ಷಕರು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಬೇಕು ಬಿ.ಟಿ.ಕುಮಾರಸ್ವಾಮಿ ಹೆಚ್ಚುವರಿ ಜಿಲ್ಲಾಧಿಕಾರಿ
ವೆಬ್ ಕಾಸ್ಟಿಂಗ್‌ಗೆ ಸಿದ್ಧತೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯ ವೆಬ್‌ಕಾಸ್ಟಿಂಗ್‌ಗೆ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಂದ ಅಗತ್ಯ ತಾಂತ್ರಿಕ ವಿವರ ಪಡೆಯಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾ ಸೌಲಭ್ಯ ಇರುವ ಕೊಠಡಿಗಳನ್ನು ಪರೀಕ್ಷೆಗೆ ಆಯ್ದುಕೊಳ್ಳಲಾಗಿದೆ. ಪರೀಕ್ಷಾ ಕಾರ್ಯಕ್ಕೆ ಮಾರ್ಗಾಧಿಕಾರಿಗಳು ನೋಡಲ್ ಅಧಿಕಾರಿಗಳು ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಮಂಜುನಾಥ ಸಭೆಗೆ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.