ADVERTISEMENT

ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ

ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ; ಜಿಲ್ಲಾಧಿಕಾರಿ ವೆಂಕಟೇಶ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2025, 4:48 IST
Last Updated 12 ಜುಲೈ 2025, 4:48 IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾತನಾಡಿದರು
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಮಾತನಾಡಿದರು   

ಚಿತ್ರದುರ್ಗ: ‘ತಂಬಾಕು ಉತ್ಪನ್ನ ಮಾರಾಟ ಮಾಡುವ ಎಲ್ಲ ಅಂಗಡಿಗಳು ವಾಣಿಜ್ಯ ಉದ್ದಿಮೆ ಪರವಾನಗಿ ಜೊತೆಗೆ ತಂಬಾಕು ಉತ್ಪನ್ನ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಪಡೆಯಬೇಕು. ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವ ಶೇ 90ರಷ್ಟು ಅಂಗಡಿಗಳು ತಿಂಗಳ ಒಳಗಾಗಿ ಪ್ರತ್ಯೇಕ ಪರವಾನಗಿ ಪಡೆಯಬೇಕು’ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಳೆದ ಬಾರಿ ನಡೆದ ತ್ರೈಮಾಸಿಕ ಸಭೆಯಲ್ಲಿಯೇ ಪ್ರತ್ಯೇಕ ತಂಬಾಕು ಪರವಾನಗಿ ನೀಡುವಂತೆ ಸೂಚಿಸಲಾಗಿತ್ತು. ನಿರೀಕ್ಷಿತ ಮಟ್ಟದಲ್ಲಿ ಪರವಾನಗಿ ನೀಡುವ ಕೆಲಸವಾಗಿಲ್ಲ. ಕೋಟ್ಪಾ ಕಾಯ್ದೆಯ ಅನುಸಾರ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಪ್ರತಿ ನಗರಸಭೆ ವ್ಯಾಪ್ತಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್, ಟೀ ಹಾಗೂ ಪಾನ್ ಶಾಪ್‍ಗಳಿಗೆ ವ್ಯಾಪಾರ ಪರವಾನಗಿ ನೀಡುವಾಗಲೇ ಪ್ರತ್ಯೇಕ ಪರವಾನಗಿ ಪಡೆಯುವಂತೆ ಷರತ್ತು ವಿಧಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

‘ಶಾಲೆ, ಕಾಲೇಜು, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ವ್ಯಾಪಾರ ಮಳಿಗೆಗಳಲ್ಲಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್‍ಗಳಲ್ಲಿ ತಂಬಾಕು ಮಾರಾಟ ನಿಷೇಧವಿದೆ. ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ದೃಢೀಕರಣ ಪಡೆಯಬೇಕು. ನಿಯಮ ಮೀರಿ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಕಂಡುಬಂದರೆ, ಅಂತಹ ವ್ಯಾಪಾರಿಗಳ ಬಾಡಿಗೆ ಒಡಂಬಡಿಕೆ ರದ್ದು ಮಾಡಬೇಕು’ ಎಂದು ಸೂಚಿಸಿದರು.

‘ಬಾರ್ ಅಂಡ್ ರೆಸ್ಟೋರೆಂಟ್‍ ಟೇಬಲ್‍ಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಒದಗಿಸುವುದಕ್ಕೆ ನಿಷೇಧವಿದೆ. ಅಲ್ಲಿ ಪ್ರತ್ಯೇಕ ತಂಬಾಕು ಸೇವನೆ, ಧೂಮಪಾನ ವಲಯಗಳನ್ನು ನಿರ್ಮಿಸಬೇಕು. ಈ ನಿಯಮ ಪಾಲನೆ ನಂತರವೇ ಅಬಕಾರಿ ಇಲಾಖೆಯಿಂದ ಪರವಾನಗಿ ನೀಡಬೇಕು. ಅಧಿಕಾರಿಗಳು ಬಾರ್ ಅಂಡ್ ರೆಸ್ಟೋರೆಂಟ್‍ಗಳಲ್ಲಿ ಈ ನಿಯಮ ಪಾಲನೆ ಆಗುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಕಾಲಕಾಲಕ್ಕೆ ಪರಿಶೀಲಿಸಬೇಕು. ಉಲ್ಲಂಘನೆ ಕಂಡುಬಂದಲ್ಲಿ ಲೈಸೆನ್ಸ್ ರದ್ದತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚಂದ್ರಶೇಖರ ಕಂಬಾಳಿ ಮಠ ಮಾತನಾಡಿ, ‘ಜಿಲ್ಲಾ ಅಪರಾಧ ದಾಖಲೆ ಬ್ಯೂರೋ ವರದಿ ಅನುಸಾರ 2025ರ ಏಪ್ರಿಲ್‌ನಿಂದ ಜೂನ್‌ವರೆಗೆ ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಉಲ್ಲಂಘನೆ ಅಡಿ ಒಟ್ಟು 4,801 ಪ್ರಕರಣಗಳನ್ನು ದಾಖಲಿಸಿ ಒಟ್ಟು ₹ 3,39,920 ದಂಡ ವಸೂಲಿ ಮಾಡಲಾಗಿದೆ. ಪೊಲೀಸ್ ಇಲಾಖೆ ವತಿಯಿಂದ 2,764 ಪ್ರಕರಣ ದಾಖಲಿಸಿ ₹ 2,22,450 ದಂಡ ವಸೂಲಿ ಮಾಡಲಾಗಿದೆ’ ಎಂದರು.

‘ತಂಬಾಕು ನಿಯಂತ್ರ ಕೋಶದಿಂದ 317 ಪ್ರಕರಣ ದಾಖಲಿಸಿ ₹ 36,350 ದಂಡ ವಸೂಲಿ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಸೇವನೆ ನಿಷೇಧ ನಿಯಮ ಉಲ್ಲಂಘನೆಗೆ ಈ ಹಿಂದೆ ಇದ್ದ ದಂಡದ ಮೊತ್ತವನ್ನು ₹ 200ಗಳಿಂದ ₹ 1,000ಕ್ಕೆ ಹೆಚ್ಚಿಸಲಾಗಿದೆ’ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಡಿವೈಎಸ್‌ಪಿ ಉಮೇಶ್ ಈಶ್ವರ ನಾಯ್ಕ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಂ.ಆರ್‌.ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ, ತಂಬಾಕು ನಿಯಂತ್ರಣ ಕೋಶ ವಿಭಾಗೀಯ ಸಂಯೋಜಕ ಮಹಾಂತೇಶ್ ಇದ್ದರು.

14 ತಂಬಾಕು ಮುಕ್ತ ಹಳ್ಳಿಗಳು

ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರ ಬಿ.ಎನ್. ಪ್ರಭುದೇವ ಮಾತನಾಡಿ ‘ಜಿಲ್ಲೆಯಲ್ಲಿ ಒಟ್ಟು 14 ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮ ಎಂದು ಘೊಷಿಸಲು ಆಯ್ಕೆ ಮಾಡಿಕೊಳ್ಳಲಾಗಿದೆ. ಚಿತ್ರದುರ್ಗ ತಾಲ್ಲೂಕಿನ ಕಲ್ಲೇನಹಳ್ಳಿ ಮಳಲಿ ಹಾಯಿತೋಳು ಲಂಬಾಣಿಹಟ್ಟಿ ಹೊಳಲ್ಕೆರೆಯ ಗರಗ ಮಹದೇವಪುರ ಕುಟಿಗೇಹಳ್ಳಿ ಅಂದನೂರು ಗೊಲ್ಲರಹಟ್ಟಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ’ ಎಂದರು. ‘ಹೊಸದುರ್ಗ ತಾಲ್ಲೂಕಿನ ರಂಗಾಪುರ ಬೇವಿನಹಳ್ಳಿ ಅರಸಿನತೋಟ ಸಣ್ಣತಿಪ್ಪೇನಹಳ್ಳಿ ಚಳ್ಳಕೆರೆಯ ಓಬಯ್ಯನಹಟ್ಟಿ ಗೊಲ್ಲರಹಟ್ಟಿ ಹಿರಿಯೂರಿನ ಡಿ.ಕೆ.ಹಟ್ಟಿ ಮೊಳಕಾಲ್ಮುರು ತಾಲ್ಲೂಕಿ ತುಪ್ಪದಕ್ಕನಹಳ್ಳಿ ತಂಬಾಕು ಮುಕ್ತವಾಗಿವೆ. ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ 1978 ಜನರು ಸೇವೆ ಪಡೆದಿದ್ದಾರೆ 183 ಜನರು ಚಿಕಿತ್ಸೆ ಪಡೆದಿದ್ದಾರೆ 25 ಜನರು ತಂಬಾಕು ಸೇವನೆ ತ್ಯಜಿಸಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.