ಚಿತ್ರದುರ್ಗ: ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಬದುಕುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಲಿಂಗತ್ವ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಬರುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇಲ್ಲದಿದ್ದರೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಈ ಕುರಿತು ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರ ಸಮಸ್ಯೆಗಳನ್ನು ಅಧಿಕಾರಿಗಳು ಅರ್ಥ ಮಾಡಿಕೊಂಡು ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ಜಿಲ್ಲಾ ಮಟ್ಟ ಹಾಗೂ ತಾಲ್ಲೂಕು ಮಟ್ಟದಲ್ಲಿ ತ್ರೈಮಾಸಿಕ ಸಭೆಗಳನ್ನು ಆಯೋಜಿಸಿ, ಅವರ ಸಮಸ್ಯೆಗಳನ್ನು ಆಲಿಸಬೇಕು. ಸಮಸ್ಯೆಗೆ ಪರಿಹಾರ ಒದಗಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರು ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸಹಾಯ ಮಾಡಬೇಕು’ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ ‘ಚಿತ್ರದುರ್ಗ ತಾಲ್ಲೂಕಿನಲ್ಲಿ 53, ಚಳ್ಳಕೆರೆ 16, ಹೊಳಲ್ಕೆರೆ 1, ಹೊಸದುರ್ಗ 3, ಹಿರಿಯೂರು 42, ಮೊಳಕಾಲ್ಮುರು 35 ಸೇರಿದಂತೆ ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 150 ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ’ ಎಂದರು.
‘ಇಲಾಖೆವಾರು ಟ್ರಾನ್ಸ್‌ಜೆಂಡರ್ ಪಾಲಿಸಿ ಅನುಷ್ಠಾನಕ್ಕೆ ಅಧಿಕಾರಿಗಳು ಕ್ರಮವಹಿಸಬೇಕು. ಈಗಾಗಲೇ ಜಿಲ್ಲೆಯ ಪ್ರತಿ ಪೊಲೀಸ್ ಠಾಣಾವಾರು ನೋಡಲ್ ಅಧಿಕಾರಿಗಳ ನೇಮಕವಾಗಿದ್ದು, ಪೊಲೀಸ್ ಓರಿಯಂಟೇಷನ್ ಕಾರ್ಯಕ್ರಮ ಆಗಬೇಕು’ ಎಂದು ಲಿಂಗತ್ವ ಲಿಂಗತ್ವ ಅಲ್ಪಸಂಖ್ಯಾತರ ಪ್ರತಿನಿಧಿ ಮಲ್ಲು ಸಭೆಗೆ ಮಾಹಿತಿ ನೀಡಿದರು.
ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮಪ್ಪ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಸುಧಾ ಇದ್ದರು.
ಲಿಂಗತ್ವ ಅಲ್ಪಸಂಖ್ಯಾತರ ಕುಂದುಕೊರತೆ ಆಲಿಸಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗಿ ಜಿಲ್ಲೆಯಲ್ಲಿ ಒಟ್ಟು 150 ಲಿಂಗತ್ವ ಅಲ್ಪಸಂಖ್ಯಾತರು
‘ಸಮೀಕ್ಷೆ ಶೀಘ್ರದಲ್ಲೇ ಆರಂಭ’ ‘78 ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆ ಮಾಡಲಾಗಿದೆ. 28 ಜನರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದಾರೆ. 139 ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನಕರ ಚಟುವಟಿಕೆಯ ಸೌಲಭ್ಯ ಪಡೆದಿದ್ದಾರೆ. ಲಿಂಗತ್ವ ಅಲ್ಪಸಂಖ್ಯಾತರ ನಿಖರ ಮಾಹಿತಿ ಸಂಗ್ರಹಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಶೀಘ್ರ ಸರ್ವೇ ಕಾರ್ಯ ಪ್ರಾರಂಭವಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಹೆಸರು ನೋಂದಣಿ ಮಾಡಿಸಬೇಕು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್ ಹೇಳಿದರು. ‘ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಅಂಕಿ ಅಂಶಗಳು ಅಗತ್ಯ. ಲಿಂಗತ್ವ ಅಲ್ಪಸಂಖ್ಯಾತರ ಸರ್ವೇ ಮಾಡುವುದು ಬಹು ದಿನಗಳ ಬೇಡಿಕೆಯಾಗಿದ್ದು ಶೀಘ್ರದಲ್ಲಿ ಸರ್ವೇ ಕಾರ್ಯಕ್ರಮ ಪ್ರಾರಂಭವಾಗಲಿದೆ. ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ಹಾಗೂ ವಸತಿ ಸೌಲಭ್ಯ ಪಡೆಯಲು ದಾಖಲಾತಿಗಳು ಕಡ್ಡಾಯವಾಗಿ ಬೇಕಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.